ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಕಳೆದ ಒಂದು ವಾರದಿಂದ ತೀವ್ರ ಚರ್ಚೆಗೆ ಕಾರಣವಾಗಿದ್ದ ಪಟ್ಟಣದ ಕೆಂಚಲಾಪೂರ ಬಡಾವಣೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪುನರಾರಂಭಗೊಂಡಿದ್ದು, ಗುರುವಾರ ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಜ ಸೀಮಿಕೇರಿ ಶಾಲೆಗೆ ಭೇಟಿ ನೀಡಿ ಪಾಲಕರು, ಸಾರ್ವಜನಿಕರು ಹಾಗೂ ಶಿಕ್ಷಣ ಪ್ರೇಮಿಗಳ ಸಭೆ ನಡೆಸುವ ಮೂಲಕ ಉಂಟಾಗಿದ್ದ ಗೊಂದಲವನ್ನು ನಿವಾರಿಸುವ ಪ್ರಯತ್ನ ನಡೆಸಿದರು.
ಸುಮಾರು 30 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಈ ಶಾಲೆಯಲ್ಲಿ ಕಳೆದ ಎರಡು-ಮೂರು ವರ್ಷಗಳಿಂದ ಉಂಟಾದ ನಿರ್ಲಕ್ಷ್ಯದಿಂದ ಮಕ್ಕಳು ವರ್ಗಾವಣೆ ಪ್ರಮಾಣಪತ್ರ ಪಡೆದು ಬೇರೆ ಶಾಲೆಗಳಿಗೆ ದಾಖಲಾದ ಕಾರಣ, ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಶೂನ್ಯ ದಾಖಲಾತಿ ಉಂಟಾಗಿತ್ತು. ಇದರಿಂದ ಶಾಲೆಯನ್ನು ಮುಚ್ಚಲಾಗುತ್ತಿದೆ ಎಂಬ ಆತಂಕ ಸಾರ್ವಜನಿಕ ವಲಯದಲ್ಲಿ ಮೂಡಿತ್ತು.
ಸಾರ್ವಜನಿಕರ ಆಕ್ರೋಶ ಮತ್ತು ಶಾಲೆ ಉಳಿಸಬೇಕೆಂಬ ಒತ್ತಾಯದ ಹಿನ್ನೆಲೆಯಲ್ಲಿ ಕಾರ್ಯಪ್ರವೃತ್ತರಾದ ಶಿಕ್ಷಣ ಇಲಾಖೆ ಅಧಿಕಾರಿಗಳು ಪಾಲಕರ ಮನವೊಲಿಸಿ ಮಕ್ಕಳನ್ನು ಮತ್ತೆ ಶಾಲೆಗೆ ಕಳುಹಿಸುವಂತೆ ಮನವಿ ಮಾಡಿದ್ದರು. ಅದರಂತೆ ಮಂಗಳವಾರ ಶಾಲೆ ಪುನರಾರಂಭಗೊಂಡಿತ್ತು. ಈ ಹಿನ್ನೆಲೆಯಲ್ಲಿ ಗುರುವಾರ ನಡೆದ ಪಾಲಕರು, ಸಾರ್ವಜನಿಕರು ಹಾಗೂ ಶಿಕ್ಷಣ ಪ್ರೇಮಿಗಳ ಸಭೆಗೆ ವಿಶೇಷ ಮಹತ್ವ ದೊರೆಯಿತು.
ಸಭೆಯಲ್ಲಿ ಮಾತನಾಡಿದ ಯುವ ಮುಖಂಡ ಮಂಜುನಾಥ ಮಾಗಡಿ, ಕೆಂಚಲಾಪೂರ ಶಾಲೆಯಲ್ಲಿ ಶಿಕ್ಷಣದ ಗುಣಮಟ್ಟದ ಬಗ್ಗೆ ಅಧಿಕಾರಿಗಳು ಹೆಚ್ಚಿನ ಗಮನ ಹರಿಸಬೇಕು. ಶಿಕ್ಷಕರು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕು. ಕನ್ನಡ ಶಾಲೆಗಳನ್ನು ಉಳಿಸಿ ಬೆಳೆಸುವುದು ಎಲ್ಲರ ಜವಾಬ್ದಾರಿಯಾಗಿದ್ದು, ಈ ಶಾಲೆಯಲ್ಲಿ ಎಲ್‌ಕೆಜಿ ಹಾಗೂ ಯುಕೆಜಿ ತರಗತಿಗಳನ್ನು ಆರಂಭಿಸಬೇಕು. ಈ ಭಾಗದ ಜನರು ಶಾಲೆಯ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನೀಡಲಿದ್ದಾರೆ ಎಂದು ಹೇಳಿದರು.
ಬಳಿಕ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಜ ಸೀಮಿಕೇರಿ, ಶಿಕ್ಷಕರು ನಿರೀಕ್ಷಿತ ರೀತಿಯಲ್ಲಿ ಕಾರ್ಯನಿರ್ವಹಿಸದಿರುವುದರಿಂದ ಶಾಲೆ ಈ ಸ್ಥಿತಿಗೆ ತಲುಪಿದೆ ಎಂಬ ಪಾಲಕರು ಹಾಗೂ ಸಾರ್ವಜನಿಕರ ಆರೋಪವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಇಂತಹ ಪರಿಸ್ಥಿತಿಯು ಇಡೀ ಶಿಕ್ಷಣ ಇಲಾಖೆಗೆ ಕೆಟ್ಟ ಹೆಸರು ತರುವಂತಾಗಿದೆ ಎಂದು ಹೇಳಿದರು.
ಶಾಲೆಯನ್ನು ಯಾವುದೇ ಕಾರಣಕ್ಕೂ ಬಂದ್ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ಶಿಕ್ಷಕರು ಪ್ರಾಮಾಣಿಕತೆ ಹಾಗೂ ದಕ್ಷತೆಯಿಂದ ಕಾರ್ಯನಿರ್ವಹಿಸಿ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು. ಶಿಕ್ಷಕ ವೃತ್ತಿಯ ಗೌರವವನ್ನು ಕಾಪಾಡಿಕೊಂಡು ವೃತ್ತಿ ಬದುಕನ್ನು ಸಾರ್ಥಕಗೊಳಿಸಬೇಕು ಎಂದು ಪರೋಕ್ಷ ಎಚ್ಚರಿಕೆ ನೀಡಿದರು.
ಇದೇ ವೇಳೆ ಶಾಲೆಗೆ ಒಬ್ಬ ಶಿಕ್ಷಕರನ್ನು ಸ್ಥಳದಲ್ಲಿಯೇ ನಿಯೋಜಿಸುವ ಭರವಸೆ ನೀಡಿ, ಸಂಬಂಧಿತ ಶಿಕ್ಷಕರ ಹೆಸರನ್ನು ಘೋಷಿಸಿದರು. ಅವರು ತಕ್ಷಣದಿಂದಲೇ ಕರ್ತವ್ಯಕ್ಕೆ ಹಾಜರಾಗಿ ಕಾರ್ಯನಿರ್ವಹಿಸುವಂತೆ ಸೂಚಿಸಲಾಯಿತು. ಮುಂದಿನ ದಿನಗಳಲ್ಲಿ ಇಂತಹ ಪರಿಸ್ಥಿತಿ ಮರುಕಳಿಸದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಶಿವರಾಜ ಸೀಮಿಕೇರಿ ಭರವಸೆ ನೀಡಿದರು.
ಸಭೆಯಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಸುಲೇಮಾನ ಮುಜಾವರ, ಶಿಕ್ಷಣ ಸಂಯೋಜಕ ಆರ್.ಬಿ. ಜೋಶಿ, ಕ್ಷೇತ್ರ ಸಮನ್ವಯಾಧಿಕಾರಿ ಎಸ್.ಕೆ. ಹವಾಲ್ದಾರ, ಸಿಆರ್‌ಪಿಗಳಾದ ಉಮೇಶ ನೇಕಾರ, ಶ್ರೀನಿವಾಸ ಮತ್ತೂರ, ಎನ್.ಎ. ಮುಲ್ಲಾ, ಶಿಕ್ಷಕರಾದ ಚಂದ್ರಕಾಂತ ನೇಕಾರ, ಬಿ.ಎಂ. ಕುಂಬಾರ, ಡಿ.ಬಿ. ದೊಡ್ಡಮನಿ, ಶಾಲೆಯ ಮುಖ್ಯಶಿಕ್ಷಕಿ ಎಲ್.ಕೆ. ಹೆಬ್ಬಳ್ಳಿ ಸೇರಿದಂತೆ ಓಣಿಯ ಹಿರಿಯರು, ಪಾಲಕರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಕೆಂಚಲಾಪೂರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಯಾವುದೇ ಕಾರಣಕ್ಕೂ ಮುಚ್ಚುವುದಿಲ್ಲ. ಶಾಲೆಯನ್ನು ಉಳಿಸಿ ಬೆಳೆಸಲು ಶಿಕ್ಷಣ ಇಲಾಖೆ, ಶಿಕ್ಷಕರು, ಪಾಲಕರು ಹಾಗೂ ಸಾರ್ವಜನಿಕರೆಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಶಾಲೆಯ ಹಿಂದಿನ ವೈಭವವನ್ನು ಮರಳಿ ತರಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು.
— ಶಿವರಾಜ ಸೀಮಿಕೇರಿ, ಕ್ಷೇತ್ರ ಶಿಕ್ಷಣಾಧಿಕಾರಿ



