ವಿಜಯಸಾಕ್ಷಿ ಸುದ್ದಿ, ನರಗುಂದ: ತಾಲೂಕಿನ ಸರ್ಕಾರಿ ಶಾಲೆಗಳಿಂದ ಹೊರಗುಳಿದ ಮಕ್ಕಳನ್ನು ಪುನಃ ಶಾಲೆಗೆ ದಾಖಲಿಸಲು ವಿಶೇಷ ಅಭಿಯಾನ ಕೈಗೊಳ್ಳುವಂತೆ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಧರ್ ಚಿನಗುಂಡಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಶಿರೋಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲ್ಲಾಪುರ ಸರ್ಕಾರಿ ಹಿರಿಯ ಪ್ರೌಢಶಾಲೆಗೆ ಭೇಟಿ ನೀಡಿದ ಅವರು, ಶಿಕ್ಷಕರ ಹಾಗೂ ವಿದ್ಯಾರ್ಥಿಗಳ ಹಾಜರಾತಿ ಪರಿಶೀಲನೆ ನಡೆಸಿದ ವೇಳೆ ಐವರು ವಿದ್ಯಾರ್ಥಿಗಳು ದೀರ್ಘಾವಧಿಯಿಂದ ಶಾಲೆಗೆ ಗೈರಾಗಿರುವುದು ಬೆಳಕಿಗೆ ಬಂತು.
ತಕ್ಷಣವೇ ಕ್ಷೇತ್ರ ಶಿಕ್ಷಣಾಧಿಕಾರಿಯನ್ನು ದೂರವಾಣಿ ಮೂಲಕ ಸಂಪರ್ಕಿಸಿದ ಇಓ ಶ್ರೀಧರ್ ಚಿನಗುಂಡಿ, ಗೈರುಹಾಜರಾಗಿರುವ ಮಕ್ಕಳನ್ನು ಮರಳಿ ಶಾಲೆಗೆ ಸೇರಿಸಲು ತುರ್ತು ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಜೊತೆಗೆ ತಾಲೂಕಿನಾದ್ಯಂತ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಿ ಪುನಃ ದಾಖಲಿಸುವ ವಿಶೇಷ ಅಭಿಯಾನ ಹಮ್ಮಿಕೊಳ್ಳುವಂತೆ ನಿರ್ದೇಶನ ನೀಡಿದರು. ಇದಕ್ಕೆ ಸ್ಪಂದಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಭೇಟಿಯ ವೇಳೆ ಶಾಲೆಯಲ್ಲೇ ಮಧ್ಯಾಹ್ನದ ಬಿಸಿಯೂಟ ಸವಿದ ಇಓ ಅವರು, ಆಹಾರದ ಗುಣಮಟ್ಟವನ್ನು ಪರಿಶೀಲಿಸಿದರು. ಅಡುಗೆ ಕೊಠಡಿಗೆ ಭೇಟಿ ನೀಡಿ ಆಹಾರ ಸಾಮಗ್ರಿಗಳ ಸಂಗ್ರಹಣೆ ಹಾಗೂ ಶುಚಿತ್ವವನ್ನು ವೀಕ್ಷಿಸಿ, ಮನೆಯ ಮಕ್ಕಳಿಗೆ ಸಿದ್ಧಪಡಿಸುವ ಗುಣಮಟ್ಟದಲ್ಲೇ ಶಾಲಾ ಮಕ್ಕಳಿಗೂ ಆಹಾರ ತಯಾರಿಸುವಂತೆ ಅಡುಗೆ ಸಿಬ್ಬಂದಿಗೆ ಸೂಚಿಸಿದರು.
ಶಿಕ್ಷಕರ ಚಲನವಲನ ಪುಸ್ತಕ, ಅಡುಗೆ ಸಿಬ್ಬಂದಿಯ ಸ್ಟಾಕ್ ರಿಜಿಸ್ಟರ್ ಸೇರಿದಂತೆ ವಿವಿಧ ದಾಖಲೆಗಳನ್ನು ಪರಿಶೀಲಿಸಿದ ಅವರು, ಎಲ್ಲಾ ದಾಖಲಾತಿಗಳನ್ನು ನಿಯಮಿತವಾಗಿ ನವೀಕರಿಸಬೇಕು ಎಂದು ತಿಳಿಸಿದರು.
ಇದೇ ವೇಳೆ ಶಾಲಾ ಮೈದಾನದ ಕಾಂಪೌಂಡ್ ಗೋಡೆ ಕಾಮಗಾರಿ, ಶಿರೋಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸ ಗಟಾರ್ ಕಾಮಗಾರಿ ಸ್ಥಳ ಹಾಗೂ ನರೇಗಾ ಯೋಜನೆಯಡಿ ನಿರ್ಮಿಸಲಾದ ಸ್ಮಶಾನ ಅಭಿವೃದ್ಧಿ ಕಾಮಗಾರಿಯನ್ನು ಪರಿಶೀಲಿಸಿದರು.
ನಂತರ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಕಾರ್ಯಕರ್ತೆಯರ ಹಾಜರಾತಿ, ಪೌಷ್ಟಿಕ ಆಹಾರ ಮತ್ತು ರೇಷನ್ ದಾಸ್ತಾನು ದಾಖಲೆಗಳನ್ನು ಪರಿಶೀಲಿಸಿದರು. ಶಿರೋಳ ಗ್ರಾಮ ಪಂಚಾಯಿತಿ ಕಚೇರಿಗೂ ಭೇಟಿ ನೀಡಿ ಸಿಬ್ಬಂದಿಯ ಹಾಜರಾತಿ ಪುಸ್ತಕ ಪರಿಶೀಲಿಸಿ ಅಗತ್ಯ ಸೂಚನೆಗಳನ್ನು ನೀಡಿದರು.
ಈ ಸಂದರ್ಭದಲ್ಲಿ ಪಿಡಿಓ ಮಲ್ಲಪ್ಪ ವಾಲಿ, ನರೇಗಾ ತಾಂತ್ರಿಕ ಸಂಯೋಜಕ ಹನಮಂತ ಡಂಬಳ, ತಾಂತ್ರಿಕ ಸಹಾಯಕ ವೀರಯ್ಯ ಶಹಾಪುರ ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿ ಉಪಸ್ಥಿತರಿದ್ದರು.
“ತಾಲೂಕಿನ ಯಾವುದೇ ಮಗು ಶಾಲೆಯಿಂದ ಹೊರಗುಳಿಯಬಾರದು. ಗೈರುಹಾಜರಾಗಿರುವ ಮಕ್ಕಳನ್ನು ಗುರುತಿಸಿ ಪುನಃ ಶಾಲೆಗೆ ಸೇರಿಸಲು ವಿಶೇಷ ಅಭಿಯಾನ ಕೈಗೊಳ್ಳಬೇಕು.”
— ಶ್ರೀಧರ್ ಚಿನಗುಂಡಿ, ಇಒ, ತಾಲೂಕು ಪಂಚಾಯತ್, ನರಗುಂದ



