ಬೆಂಗಳೂರು: ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯ ಸಚ್ ಪಾಸ್ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರಿನ ಎರಡು ಕುಟುಂಬಗಳಿಗೆ ಸೇರಿದ ಏಳು ಮಂದಿ ಸೇರಿದಂತೆ ಒಟ್ಟು ಎಂಟು ಮಂದಿ ಮೃತಪಟ್ಟಿರುವ ಘಟನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, ಪ್ರವಾಸಕ್ಕೆ ತೆರಳಿದ್ದ ಕುಟುಂಬಗಳು ದುರಂತಕರವಾಗಿ ಸಾವನ್ನಪ್ಪಿರುವ ಸುದ್ದಿ ತಿಳಿದು ತೀವ್ರ ಆಘಾತವಾಗಿದೆ ಎಂದು ತಿಳಿಸಿದ್ದಾರೆ. ಸಂತಸದ ಕ್ಷಣಗಳನ್ನು ಕಳೆಯಲು ತೆರಳಿದ್ದ ಕುಟುಂಬಗಳು ದುರ್ಘಟನೆಯಲ್ಲಿ ಜೀವ ಕಳೆದುಕೊಂಡಿರುವುದು ಅತ್ಯಂತ ನೋವಿನ ಸಂಗತಿ ಎಂದು ಹೇಳಿದ್ದಾರೆ.
ರಾಜ್ಯ ಸರ್ಕಾರವು ಹಿಮಾಚಲ ಪ್ರದೇಶ ಸರ್ಕಾರದೊಂದಿಗೆ ತಕ್ಷಣ ಸಂಪರ್ಕ ಸಾಧಿಸಿ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು. ಮೃತರ ಪಾರ್ಥಿವ ಶರೀರಗಳನ್ನು ಶೀಘ್ರವಾಗಿ ಬೆಂಗಳೂರಿಗೆ ತರಲು ಅಗತ್ಯ ಕ್ರಮ ಕೈಗೊಳ್ಳಬೇಕು. ಅಲ್ಲದೆ, ಸಂತ್ರಸ್ತ ಕುಟುಂಬಗಳಿಗೆ ಬೇಕಾದ ಎಲ್ಲಾ ರೀತಿಯ ನೆರವು ಮತ್ತು ಬೆಂಬಲ ಒದಗಿಸಬೇಕು ಎಂದು ವಿಜಯೇಂದ್ರ ಒತ್ತಾಯಿಸಿದ್ದಾರೆ.
ಅಪಘಾತದಲ್ಲಿ ಮೃತಪಟ್ಟ ಎಲ್ಲರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸಿರುವ ಅವರು, ಕುಟುಂಬದ ಸದಸ್ಯರನ್ನು ಕಳೆದುಕೊಂಡು ದುಃಖದಲ್ಲಿರುವ ಬಂಧು-ಬಳಗಕ್ಕೆ ಈ ಆಘಾತವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಸಂತಾಪ ಸೂಚಿಸಿದ್ದಾರೆ.



