ಬೆಳ್ತಂಗಡಿ:- ಮಹೇಶ್ ಶೆಟ್ಟಿ ತಿಮರೋಡಿ ಅವರ ನಿವಾಸದಲ್ಲಿ ಅಕ್ರಮ ಶಸ್ತ್ರಾಸ್ತ್ರ ಪತ್ತೆಯಾದ ಹಿನ್ನೆಲೆಯಲ್ಲಿ ಅವರ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆಯಡಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆಗಸ್ಟ್ 26 ರಂದು, ನ್ಯಾಯಾಲಯದ ವಾರಂಟ್ ಪಡೆದು ಎಸ್‌ಐಟಿ ಅಧಿಕಾರಿಗಳು ಉಜಿರೆಯಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿ ಅವರ ನಿವಾಸದಲ್ಲಿ ಶೋಧ ನಡೆಸಿದ್ದರು. ಈ ಕಾರ್ಯಾಚರಣೆಯ ವೇಳೆ, ಎರಡು ತಲವಾರುಗಳು ಮತ್ತು ಒಂದು ಬಂದೂಕು ಸೇರಿದಂತೆ ಒಟ್ಟು 44 ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಈ ಬಗ್ಗೆ ತನಿಖಾ ತಂಡವು ಬೆಳ್ತಂಗಡಿ ನ್ಯಾಯಾಲಯಕ್ಕೆ ವರದಿಯನ್ನು ಸಲ್ಲಿಸಿತ್ತು.
ಇದರ ಮುಂದುವರಿದ ಭಾಗವಾಗಿ, ಎಸ್‌ಐಟಿ ಎಸ್‌ಪಿ ಸಿ.ಎ. ಸೈಮನ್ ಅವರು ಸೆಪ್ಟೆಂಬರ್ 16 ರಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ತಿಮರೋಡಿ ತಮ್ಮ ಮನೆಯಲ್ಲಿ ಅಕ್ರಮವಾಗಿ ಮಾರಕಾಸ್ತ್ರಗಳನ್ನು ಸಂಗ್ರಹಿಸಿಟ್ಟಿರುವ ಬಗ್ಗೆ ಮುಂದಿನ ತನಿಖೆ ನಡೆಸಬೇಕೆಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದರು.
ಈ ದೂರಿನ ಆಧಾರದ ಮೇಲೆ, ಮಹೇಶ್ ಶೆಟ್ಟಿ ತಿಮರೋಡಿ ಅವರ ವಿರುದ್ಧ ಆರ್ಮ್ಸ್ ಆಕ್ಟ್ 1959ರ ಸೆಕ್ಷನ್ 25(1), 25(1-ಎ), ಮತ್ತು 24(1-ಬಿ)(ಎ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ.



