ಬೆಂಗಳೂರು: ಕರ್ನಾಟಕದಲ್ಲಿ ಸಿನಿಮಾ ಟಿಕೆಟ್ ದರಗಳನ್ನು ಇಳಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ನೀಡಿತ್ತು.. ಸರ್ಕಾರದ ಆದೇಶದ ವಿರುದ್ಧ ಮಲ್ಟಿಪ್ಲೆಕ್ಸ್, ಹೊಂಬಾಳೆ, ಇನ್ನೂ ಕೆಲ ನಿರ್ಮಾಪಕ ಸಂಸ್ಥೆಗಳು ಹೈಕೋರ್ಟ್ನಲ್ಲಿ ಆದೇಶದ ವಿರುದ್ಧ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ಕೊಟ್ಟಿದೆ.
ಪರಭಾಷಾ ಸಿನಿಮಾಗಳ ಹಾವಳಿ, ಮಿತಿ ಮೀರಿದ ಟಿಕೆಟ್ ದರದ ವಿರುದ್ಧ ಇಡೀ ಇಂಡಸ್ಟ್ರಿ ಏಕರೂಪ ಟಿಕೆಟ್ ದರ ನಿಗದಿ ಮಾಡಬೇಕು ಎಂದು ದಶಕಗಳಿಂದ ಹೋರಾಟ ನಡೆದಿತ್ತು. ಹತ್ತಾರು ಬಾರಿ ಈ ವಿಚಾರವಾಗಿ ಚರ್ಚೆ, ವಾದ- ಪ್ರತಿವಾದಗಳು ನಡೆದಿದ್ದವು. ಇದನ್ನು ಗಂಭೀರವಾಗಿ ಪರಿಗಣಿಸಿದ್ದ ರಾಜ್ಯ ಸರ್ಕಾರ ಏಕರೂಪದ ಟಿಕೆಟ್ ದರ ನಿಗದಿ ಮಾಡಿತ್ತು.
ಬೆನ್ನಲ್ಲೇ 200 ರೂಪಾಯಿ ನಿಗದಿ ವಿರುದ್ಧ ವಿರೋಧ ಕೂಡ ವ್ಯಕ್ತವಾಗಿತ್ತು. ಬಿಗ್ ಬಜೆಟ್ ಸಿನಿಮಾಗಳಿಗೆ ಇದರಿಂದ ತೊಂದರೆ ಆಗಲಿದೆ ಎಂಬ ಚರ್ಚೆ ಶುರುವಾಯ್ತು. ಕೊನೆಗೆ ಸರ್ಕಾರದ ನಿರ್ಧಾರವನ್ನ ಪ್ರಶ್ನಿಸಿ ಹೈಕೋರ್ಟ್ಗೆ ಅರ್ಜಿ ಸಲ್ಲಿಕೆ ಆಗಿತ್ತು. ವಿಚಾರಣೆ ನಡೆಸಿದ್ದ ಹೈಕೋರ್ಟ್ನ ನ್ಯಾಯಮೂರ್ತಿ ರವಿ ಹೊಸಮನಿ ನೇತೃತ್ವದ ಪೀಠವು, ಸರ್ಕಾರದ ಆದೇಶಕ್ಕೆ ತಡೆ ನೀಡಿದೆ.
ಸರ್ಕಾರ ಏಕಪಕ್ಷೀಯವಾಗಿ ನಿರ್ಧಾರ ಕೈಗೊಂಡು ದರ ನಿಗದಿ ಮಾಡಿದೆ. ಇದು ಕಾನೂನು ಬಾಹಿರ ಆದೇಶವಾಗಿದ್ದು, ನಾವು ಕೋಟ್ಯಂತರ ರೂ. ಹೂಡಿಕೆ ಮಾಡಿ ಸಿನಿಮಾ ನಿರ್ಮಾಣ ಮಾಡುತ್ತೇವೆ. ಕಡಿಮೆ ಸೀಟುಗಳಿಗೆ ಹೆಚ್ಚಿನ ಸೌಲಭ್ಯ ನೀಡಲಾಗುತ್ತಿದೆ. ಸಿನಿಮಾ ನಿರ್ಮಿಸಲು ಸಾಕಷ್ಟು ಶ್ರಮ, ಬಂಡವಾಳ ಬೇಕಾಗುತ್ತದೆ. ಚಿತ್ರ ನಿರ್ಮಾಣ, ಪ್ರದರ್ಶನದ ಬಗ್ಗೆ ಮಾಹಿತಿ ತಿಳಿಯದೇ ಈ ನಿರ್ಧಾರ ಕೈಗೊಂಡಿದೆ ಎಂದು ಅರ್ಜಿದಾರರು ವಾದಿಸಿದ್ದರು. ಜೊತೆಗೆ ವಿಚಾರಣೆಯನ್ನ ಮುಂದೂಡಿಕೆ ಮಾಡಿದೆ.



