ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯಲ್ಲಿ 2024-25ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆ ಹಾನಿಯಾದ ರೈತರಿಗೆ 91 ಕೋಟಿ ರೂ ಪರಿಹಾರ ವಿತರಣೆಗೆ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಚಾಲನೆ ನೀಡಿದರು.
ಜಿಲ್ಲೆಯಲ್ಲಿ 2024-25ನೇ ಸಾಲಿನಲ್ಲಿ ಮುಂಗಾರು ಹಂಗಾಮಿನಲ್ಲಿ ಅತಿಯಾದ ಮಳೆಯಿಂದ ಬೆಳೆ ಹಾನಿಯಾಗಿರುವ ರೈತರಿಗೆ ಬೆಳೆ ಹಾನಿ ಪರಿಹಾರವನ್ನು ಡಿಬಿಟಿ ಮುಖಾಂತರ ವಿತರಿಸಲಾಗುತ್ತಿದೆ. ಜಿಲ್ಲೆಗೆ ಒಟ್ಟಾರೆ 91 ಕೋಟಿ ರೂ. ಬಿಡುಗಡೆಯಾಗಿದೆ. ಗದಗ ಮತ್ತು ಶಿರಹಟ್ಟಿ ತಾಲೂಕಿನ ರೈತರಿಗೆ 21 ಕೋಟಿ ರೂ. ಪರಿಹಾರ ಡಿಬಿಟಿ ಮುಖಾಂತರ ವಿತರಿಸಲಾಗುತ್ತಿದೆ. ನಂತರ ನರಗುಂದ, ರೋಣ ತಾಲೂಕಿನ ರೈತರಿಗೆ 55 ಕೋಟಿ ರೂ. ವಿತರಿಸಿ ನಂತರ ಉಳಿದ ತಾಲೂಕುಗಳಿಗೆ ಬೆಳೆ ಹಾನಿ ಪರಿಹಾರವನ್ನು ಡಿಬಿಟಿ ಮೂಲಕ ವಿತರಿಸಲಾಗುತ್ತಿದೆ ಎಂದು ಸಚಿವ ಡಾ. ಎಚ್.ಕೆ. ಪಾಟೀಲ ತಿಳಿಸಿದರು.
ಈ ಸಂದರ್ಭದಲ್ಲಿ ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಚಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ, ತಾಲೂಕು ಅಧ್ಯಕ್ಷ ಅಶೋಕ ಮಂದಾಲಿ, ಸಿದ್ದು ಪಾಟೀಲ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ತಹಸೀಲ್ದಾರ ಶ್ರೀನಿವಾಸಮೂರ್ತಿ ಕುಲಕರ್ಣಿ, ನಗರಸಭೆ ಪೌರಾಯುಕ್ತ ರಾಜಾರಾಮ ಪವಾರ ಸೇರಿದಂತೆ ಇತರರು ಹಾಜರಿದ್ದರು.
ತೋಟಗಾರಿಕೆ ಬೆಳೆ ಹಾನಿ ಸಮೀಕ್ಷೆ ಕೈಗೊಂಡು ಜಿಲ್ಲೆಯ 18,540 ರೈತರಿಗೆ ಪರಿಹಾರ ವಿತರಣೆಗೆ ಸೋಮವಾರ ಚಾಲನೆ ನೀಡಲಾಯಿತು. ತೋಟಗಾರಿಕೆ ಬೆಳೆಗಳಾದ ಈರುಳ್ಳಿ, ಮೆಣಸಿನಕಾಯಿ, ಸೇವಂತಿಗೆ ಬೆಳೆಗಳು ಪ್ರಮುಖವಾಗಿ ಹಾನಿಯಾದ ಬೆಳೆಗಳಾಗಿವೆ. ಅದರಂತೆ ಕೃಷಿ ಬೆಳೆಗಳಾದ ಹೆಸರು, ಗೋವಿನಜೋಳ, ಶೇಂಗಾ ಹಾನಿಯಾದ ಇತರ ಪ್ರಮುಖ ಬೆಳೆಗಳಾಗಿವೆ.



