ಬೆಂಗಳೂರು: ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಗೆ ದಿನಗಣನೆ ಆರಂಭವಾಗಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕೆಎಸ್ಆರ್ಟಿಸಿ ಉಚಿತ ಬಸ್ ಪ್ರಯಾಣ ಸೌಲಭ್ಯ ಘೋಷಿಸಿದೆ. ಪರೀಕ್ಷಾ ದಿನಗಳಲ್ಲಿ ವಿದ್ಯಾರ್ಥಿಗಳು ತಮ್ಮ ಹಾಲ್ ಟಿಕೆಟ್ ತೋರಿಸಿ ನಿವಾಸದಿಂದ ಪರೀಕ್ಷಾ ಕೇಂದ್ರದವರೆಗೆ ಕೆಎಸ್ಆರ್ಟಿಸಿ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದು ಸಂಸ್ಥೆ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.
ಮಾರ್ಚ್ 18ರಿಂದ ಏಪ್ರಿಲ್ 2ರವರೆಗೆ 2025–26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಗಳು ನಡೆಯಲಿದ್ದು, ಪ್ರತಿದಿನ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.15ರವರೆಗೆ ಪರೀಕ್ಷೆ ನಡೆಯಲಿದೆ. ವಿದ್ಯಾರ್ಥಿಗಳು ಬಸ್ನಲ್ಲಿ ಪ್ರಯಾಣಿಸುವಾಗ ಕಂಡೆಕ್ಟರ್ಗೆ ಹಾಲ್ ಟಿಕೆಟ್ ತೋರಿಸಿದರೆ ಮಾತ್ರ ಉಚಿತ ಪ್ರಯಾಣ ಸೌಲಭ್ಯ ಲಭ್ಯವಾಗಲಿದೆ ಎಂದು ಸೂಚಿಸಲಾಗಿದೆ.
ಇನ್ನೊಂದೆಡೆ, ಪರೀಕ್ಷೆಗಳನ್ನು ಸುಗಮವಾಗಿ ನಡೆಸುವ ಉದ್ದೇಶದಿಂದ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಿದ್ದಾರೆ.
ಪರೀಕ್ಷಾ ದಿನಗಳಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಜೆರಾಕ್ಸ್, ಸೈಬರ್ ಹಾಗೂ ಕಂಪ್ಯೂಟರ್ ಸೆಂಟರ್ಗಳನ್ನು ಮುಚ್ಚುವಂತೆ ಸೂಚಿಸಲಾಗಿದೆ. ಪರೀಕ್ಷೆಗಳು ಶಾಂತಿಯುತವಾಗಿ ಮತ್ತು ದೋಷರಹಿತವಾಗಿ ನಡೆಯಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.



