ಬೆಂಗಳೂರು: ಮೈಸೂರು ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ಶೈಕ್ಷಣಿಕ ಅಧಿವೇಶನ ಕಾರ್ಯಕ್ರಮವನ್ನು ರಾಜ್ಯ ಸರ್ಕಾರ ರದ್ದುಪಡಿಸಿರುವ ವಿಚಾರ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶ್ಯಾಮ್ ಪ್ರಕಾಶ್ ಮುಖರ್ಜಿ ಫೌಂಡೇಶನ್ ವತಿಯಿಂದ ವಿಶ್ವವಿದ್ಯಾಲಯದಲ್ಲಿ ಶೈಕ್ಷಣಿಕ ಅಧಿವೇಶನವನ್ನು ಆಯೋಜಿಸಲಾಗಿತ್ತು. ಆದರೆ, ರಾಜ್ಯ ಸರ್ಕಾರ ಏಕಾಏಕಿ ಕಾರ್ಯಕ್ರಮವನ್ನು ರದ್ದುಪಡಿಸುವಂತೆ ಆದೇಶ ನೀಡಿದ್ದು, ಉಪಕುಲಪತಿಗಳಿಗೆ ನೋಟಿಸ್ ನೀಡಲಾಗಿದೆ ಎಂದು ತಿಳಿದುಬಂದಿದೆ.
ಈ ಕ್ರಮವನ್ನು ಖಂಡಿಸಿದ ವಿಜಯೇಂದ್ರ, “ಇದು ದ್ವೇಷದ ರಾಜಕಾರಣ. ವಿಶ್ವವಿದ್ಯಾಲಯದಲ್ಲಿ ನಡೆಯುವ ಶೈಕ್ಷಣಿಕ ಕಾರ್ಯಕ್ರಮಕ್ಕೂ ತಡೆ ನೀಡುತ್ತಿರುವುದು ಸರಿಯಲ್ಲ” ಎಂದು ಹೇಳಿದ್ದಾರೆ.ಇದಲ್ಲದೆ, “ದ್ವೇಷ ಭಾಷಣದ ಬಗ್ಗೆ ಮಸೂದೆ ತರುವ ಸರ್ಕಾರವೇ ಇದೀಗ ಇಂತಹ ಕ್ರಮ ಕೈಗೊಳ್ಳುತ್ತಿದೆ. ಇದನ್ನೇ ದ್ವೇಷದ ರಾಜಕಾರಣವೆಂದು ಪರಿಗಣಿಸಬಹುದು” ಎಂದು ಟೀಕಿಸಿದರು.
ಶೈಕ್ಷಣಿಕ ಕ್ಷೇತ್ರದಲ್ಲಿಯೂ ರಾಜಕೀಯ ಹಸ್ತಕ್ಷೇಪ ಮಾಡುವುದು ರಾಜ್ಯ ಸರ್ಕಾರಕ್ಕೆ ಶೋಭೆ ತರಲ್ಲ ಎಂದು ಅಭಿಪ್ರಾಯಪಟ್ಟ ಅವರು, ಸಂಬಂಧಪಟ್ಟ ಸಚಿವರು ತಕ್ಷಣ ಮಧ್ಯಪ್ರವೇಶಿಸಿ, ಕಾರ್ಯಕ್ರಮ ನಡೆಯಲು ಅವಕಾಶ ಮಾಡಿಕೊಡಬೇಕು ಎಂದು ಆಗ್ರಹಿಸಿದರು.



