ಬೆಂಗಳೂರು: “ನ್ಯಾಯಾಂಗ ವ್ಯವಸ್ಥೆಯ ಮೇಲೆ ನನಗೆ ಸಂಪೂರ್ಣ ನಂಬಿಕೆ ಇದೆ. ಈ ಸಂದರ್ಭದಲ್ಲಿ ಹೆಚ್ಚಿನ ಪ್ರತಿಕ್ರಿಯೆ ನೀಡುವುದಿಲ್ಲ,” ಎಂದು ಶಾಸಕ ವಿನಯ್ ಕುಲಕರ್ಣಿ ತಿಳಿಸಿದ್ದಾರೆ.
ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದ ತೀರ್ಪು ಇಂದು ಪ್ರಕಟವಾಗಲಿದ್ದು, ಈ ಹಿನ್ನೆಲೆ ವಿನಯ್ ಕುಲಕರ್ಣಿ ಇಬ್ಬರು ಪುತ್ರಿಯರೊಂದಿಗೆ ನ್ಯಾಯಾಲಯಕ್ಕೆ ಹಾಜರಾದರು.
ಸುಮಾರು 10 ವರ್ಷಗಳ ಕಾಲ ನಡೆದ ವಿಚಾರಣೆ ಬಳಿಕ ಇಂದು ಈ ಪ್ರಕರಣದ ಅಂತಿಮ ತೀರ್ಪು ಹೊರಬೀಳುತ್ತಿದೆ. ಇದರಿಂದ ಕುಲಕರ್ಣಿಗೆ ಶಿಕ್ಷೆಯೋ ಅಥವಾ ಖುಲಾಸೆಯೋ ಎಂಬ ಕುತೂಹಲ ಮತ್ತು ಆತಂಕ ಹೆಚ್ಚಾಗಿದೆ.
2016ರ ಜೂನ್‌ನಲ್ಲಿ ಧಾರವಾಡದಲ್ಲಿ ಯೋಗೀಶ್ ಗೌಡ ಹತ್ಯೆ ನಡೆದಿದ್ದು, ಈ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ವಿರುದ್ಧ ಕೊಲೆ ಸಂಚು ಆರೋಪ ಕೇಳಿಬಂದಿತ್ತು. ತನಿಖೆ ವೇಳೆ ಆರು ಮಂದಿ ಆರೋಪಿಗಳು ಪೊಲೀಸರ ಮುಂದೆ ಶರಣಾಗಿದ್ದರು.
ಯೋಗೀಶ್ ಗೌಡ ಕುಟುಂಬದ ಮನವಿಯ ಮೇರೆಗೆ 2019ರಲ್ಲಿ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಲಾಗಿತ್ತು. ಬಳಿಕ ಸಿಬಿಐ ಅಧಿಕಾರಿಗಳು ತನಿಖೆ ನಡೆಸಿ ವಿನಯ್ ಕುಲಕರ್ಣಿಯನ್ನು ಬಂಧಿಸಿದ್ದರು.
ಪ್ರಸ್ತುತ ಈ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಸೇರಿದಂತೆ ಇಬ್ಬರು ಪೊಲೀಸರು ಸೇರಿ ಒಟ್ಟು 21 ಮಂದಿ ಆರೋಪಿಗಳಿದ್ದಾರೆ. ಆರೋಪಿಗಳ ಹಾಗೂ ಸರ್ಕಾರಿ ವಕೀಲರು ಸಲ್ಲಿಸಿದ ದಾಖಲೆಗಳ ಪರಿಶೀಲನೆ ಹಿನ್ನೆಲೆಯಲ್ಲಿ, ನ್ಯಾಯಾಲಯ ಏಪ್ರಿಲ್ 9ರಂದು ತೀರ್ಪನ್ನು ಏಪ್ರಿಲ್ 15ಕ್ಕೆ ಮುಂದೂಡಿತ್ತು.



