ಬೆಳಗಾವಿ: ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಹೆಚ್ಚುತ್ತಿರುವ ನಡುವೆ ಹಿಟ್‌ಸ್ಟ್ರೋಕ್‌ಗೆ ಮತ್ತೊಂದು ಬಲಿಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ರಾಯಬಾಗ ತಾಲೂಕಿನ ಚಿಂಚಲಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ವೆಂಕಟೇಶ್ ಬಳ್ಳಾರಿ (35) ಬಿಸಿಲಿನ ತಾಪಕ್ಕೆ ತುತ್ತಾಗಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಮೃತ ವೆಂಕಟೇಶ್ ಬಳ್ಳಾರಿ ಅವರು ರಾಯಬಾಗ ಪಟ್ಟಣದ ನಿವಾಸಿಯಾಗಿದ್ದು, ಚಿಂಚಲಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಸೋಮವಾರ (ಏ.21) ಬಸವೇಶ್ವರ ಜಯಂತಿ ಕಾರ್ಯಕ್ರಮದ ಸಂದರ್ಭದಲ್ಲಿ ಫೋಟೋ ಪೂಜೆ ಬಳಿಕ ನಡೆದ ಮೆರವಣಿಗೆಯಲ್ಲಿ ಭಾಗವಹಿಸಿದ್ದ ವೇಳೆ ಅವರಿಗೆ ತೀವ್ರ ತಲೆ ಸುತ್ತು ಉಂಟಾಗಿ ಕುಸಿದು ಬಿದ್ದಿದ್ದಾರೆ.
ತಕ್ಷಣವೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಆಪ್ತರ ಪ್ರಕಾರ, ಬಿಸಿಲಿನ ತೀವ್ರತೆಯಿಂದಾಗಿ ಅವರಿಗೆ ಹೃದಯಾಘಾತ ಸಂಭವಿಸಿರುವ ಸಾಧ್ಯತೆಯೂ ಇದೆ ಎಂದು ಹೇಳಲಾಗಿದೆ.
ಈ ಘಟನೆ ರಾಜ್ಯದಲ್ಲಿ ಹೆಚ್ಚುತ್ತಿರುವ ಬಿಸಿಲಿನ ತಾಪ ಮತ್ತು ಹಿಟ್‌ಸ್ಟ್ರೋಕ್ ಅಪಾಯದ ಬಗ್ಗೆ ಮತ್ತೊಮ್ಮೆ ಎಚ್ಚರಿಕೆ ಮೂಡಿಸಿದೆ. ಆರೋಗ್ಯ ಇಲಾಖೆ ಸಾರ್ವಜನಿಕರಿಗೆ ಬಿಸಿಲಿನ ಸಮಯದಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಮನವಿ ಮಾಡಿದೆ.



