ಧಾರವಾಡ: ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ವಿರುದ್ಧ ಷಡ್ಯಂತ್ರ ನಡೆದಿದೆ ಎಂದು ಆರೋಪಿಸಿ, ಅವರ ಬೆಂಬಲಿಗರು ಇಂದು ಧಾರವಾಡ ನಗರದಲ್ಲಿ ಮೌನ ಮೆರವಣಿಗೆ ನಡೆಸಿದರು.
ನಗರದ ಕಲಾಭವನದ ಬಳಿ ನೂರಾರು ಬೆಂಬಲಿಗರು ಜಮಾಯಿಸಿ, ಕೈಗೆ ಕಪ್ಪು ಪಟ್ಟಿಗಳನ್ನು ಕಟ್ಟಿಕೊಂಡು ಪ್ರತಿಭಟನೆಗೆ ಇಳಿದರು. ಕಲಾಭವನದಿಂದ ಕೆಸಿಸಿ ಬ್ಯಾಂಕ್ವರೆಗೆ ಶಾಂತಿಯುತವಾಗಿ ಮೆರವಣಿಗೆ ನಡೆಸಿ, ತಮ್ಮ ಅಸಮಾಧಾನ ವ್ಯಕ್ತಪಡಿಸಿದರು.
ಕುಲಕರ್ಣಿ ನಿರಪರಾಧಿ ಎಂಬ ನಿಲುವು ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಪ್ರಕರಣದಲ್ಲಿ ನ್ಯಾಯ ದೊರಕಿಸಿಕೊಡಬೇಕು ಎಂದು ಆಗ್ರಹಿಸಿದರು. ಮೌನ ಮೆರವಣಿಗೆಯ ಮೂಲಕ ತಮ್ಮ ವಿರೋಧವನ್ನು ವ್ಯಕ್ತಪಡಿಸಿದ ಅವರು, ಪ್ರಕರಣದ ವಿಚಾರದಲ್ಲಿ ನ್ಯಾಯಾಂಗವು ಸಮಗ್ರ ಪರಿಶೀಲನೆ ನಡೆಸಬೇಕೆಂದು ಒತ್ತಾಯಿಸಿದರು.
ಏನಿದು ಪ್ರಕರಣ?
2016ರಲ್ಲಿ ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆಯಾಗಿತ್ತು. ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಸೇರಿ ಒಟ್ಟು 21 ಮಂದಿ ಮೇಲೆ ಆರೋಪ ಕೇಳಿ ಬಂದಿತ್ತು.
ಪ್ರಕರಣವನ್ನು ಬಿಜೆಪಿ ಸರ್ಕಾರ ಸಿಬಿಐಗೆ ಒಪ್ಪಿಸಿತ್ತು. ಇಂಚಿಂಚು ತನಿಖೆ ನಡೆಸಿದ್ದ ಸಿಬಿಐ ಚಾರ್ಜ್ಶೀಟ್ ಸಲ್ಲಿಸಿತ್ತು. 10 ವರ್ಷಗಳ ನಿರಂತರ ತನಿಖೆ, ವಿಚಾರಣೆ ಬಳಿಕ ಕೊಲೆ, ಕ್ರಿಮಿನಲ್ ಸಂಚು, ಸಾಕ್ಷ್ಯನಾಶ, ಮಾರಕಾಸ್ತ್ರಗಳಿಂದ ಹಲ್ಲೆ, ಅಕ್ರಮ ಕೂಟ ಆರೋಪದಡಿ ದೋಷಿ ಎಂದು ಜನಪ್ರತಿನಿಧಿಗಳ ಕೋರ್ಟ್ ಆದೇಶಿಸಿತ್ತು.
ಸೋಮಶೇಖರ್ ನ್ಯಾಮಗೌಡ ಹಾಗೂ ವಾಸುದೇವ್ ನಿಲೇಕಣಿಯನ್ನ ಕೋರ್ಟ್ ಖುಲಾಸೆಗೊಳಿತ್ತು. ಇನ್ನು ಇಬ್ಬರು ನಿರ್ದೋಷಿಗಳನ್ನ ಬಿಟ್ಟು ಉಳಿದವರನ್ನು ಸಿಬಿಐ ವಶಕ್ಕೆ ಪಡೆದಿತ್ತು.
ಬಳಿಕ ಬೌರಿಂಗ್ ಆಸ್ಪತ್ರೆಯಲ್ಲಿ 17 ಅಪರಾಧಿಗಳ ವೈದ್ಯಕೀಯ ಪರೀಕ್ಷೆ ನಡೆಸಿ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಮಾಡಲಾಗಿತ್ತು. ಬಳಿಕ ಆದೇಶ ಪ್ರಕಟಿಸಿದ ಕೋರ್ಟ್ ಶಾಸಕ ವಿನಯ್ ಕುಲಕರ್ಣಿ ಸೇರಿ 16 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿದ್ದು, ಇನ್ಸ್ಪೆಕ್ಟರ್ ಚನ್ನಕೇಶವ ಟಿಂಕರಿಕರ್ಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದೆ.



