ಹಾವೇರಿ: ಜಿಲ್ಲೆಯ ಹಾನಗಲ್ ತಾಲೂಕು ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು 1 ಕೋಟಿ ರೂ. ಮೌಲ್ಯದ ಔಷಧಿ, ಮಾತ್ರೆಗಳು ಹಾಗೂ ವೈದ್ಯಕೀಯ ಉಪಕರಣಗಳು ಸುಟ್ಟು ಭಸ್ಮವಾಗಿವೆ.
ಮಾಹಿತಿಯ ಪ್ರಕಾರ, ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಆಸ್ಪತ್ರೆಯ 2ನೇ ಮಹಡಿಯಲ್ಲಿ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಇದರಿಂದ ಸುಮಾರು 40 ಲಕ್ಷ ರೂ. ಮೌಲ್ಯದ ಔಷಧಿಗಳು, 50 ಲಕ್ಷ ರೂ. ಮೌಲ್ಯದ ಮಾತ್ರೆಗಳು ಹಾಗೂ ವೈದ್ಯಕೀಯ ಉಪಕರಣಗಳು ಸಂಪೂರ್ಣವಾಗಿ ನಾಶವಾಗಿವೆ.
ಘಟನೆ ಬಗ್ಗೆ ತಿಳಿದು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಅದೃಷ್ಟವಶಾತ್ ಆಸ್ಪತ್ರೆಯಲ್ಲಿದ್ದ ರೋಗಿಗಳಿಗೆ ಯಾವುದೇ ತೊಂದರೆ ಆಗಿಲ್ಲ ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಹಾನಗಲ್ ಶಾಸಕ ಶ್ರೀನಿವಾಸ ಮಾನೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಹಾನಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.



