ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಚಾರ್ಮಾಡಿ ಘಾಟಿಯ ಅಪಾಯಕಾರಿ ನಾಲ್ಕನೇ ತಿರುವಿನಲ್ಲಿ ಖಾಸಗಿ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ.
ಧರ್ಮಸ್ಥಳದಲ್ಲಿ ಮದುವೆ ಕಾರ್ಯಕ್ರಮ ಮುಗಿಸಿಕೊಂಡು ಮೂಡಿಗೆರೆಯತ್ತ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಬಸ್ಸಿನಲ್ಲಿ ಸುಮಾರು 25 ಮಂದಿ ಪ್ರಯಾಣಿಕರಿದ್ದು, ಅಪಘಾತದ ರಭಸಕ್ಕೆ ಎಲ್ಲರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ಬಸ್ ಪ್ರಪಾತಕ್ಕೆ ಬೀಳದೆ ರಸ್ತೆಯಲ್ಲೇ ಪಲ್ಟಿಯಾದ ಕಾರಣ ಭಾರೀ ದುರಂತ ತಪ್ಪಿದೆ. ಗಾಯಾಳುಗಳನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗಳಿಗೆ ಹಾಗೂ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ನಡೆದ ತಕ್ಷಣ ಬೆಳ್ತಂಗಡಿ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಪಲ್ಟಿಯಾದ ಬಸ್ ತೆರವುಗೊಳಿಸಿ ಸಂಚಾರ ಸುಗಮಗೊಳಿಸಲಾಗಿದೆ. ಘಾಟಿ ಪ್ರದೇಶದ ಕಡಿದಾದ ತಿರುವುಗಳಲ್ಲಿ ಅತಿವೇಗ ಹಾಗೂ ಅಜಾಗರೂಕ ಚಾಲನೆಯೇ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ.



