ಬೆಂಗಳೂರು: ವಿದ್ಯಾರ್ಥಿಗಳಲ್ಲಿ ಸಾಮಾನ್ಯ ಜ್ಞಾನ ವೃದ್ಧಿ ಮತ್ತು ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಅರಿವು ಹೆಚ್ಚಿಸುವ ಉದ್ದೇಶದಿಂದ ರಾಜ್ಯದ ಎಲ್ಲಾ ಶಾಲೆಗಳಲ್ಲಿ ದಿನಪತ್ರಿಕೆ ಓದುವುದನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಕಡ್ಡಾಯಗೊಳಿಸಿದೆ. ಈ ಕುರಿತು ಅಧಿಕೃತ ಸುತ್ತೋಲೆ ಹೊರಡಿಸಲಾಗಿದೆ.
ಸುತ್ತೋಲೆಯ ಪ್ರಕಾರ, ಪ್ರಾರ್ಥನೆ ಮುಗಿದ ತಕ್ಷಣ ಪ್ರತಿದಿನ 10 ರಿಂದ 15 ನಿಮಿಷಗಳ ಕಾಲ ಪತ್ರಿಕೆ ಓದಿಸುವುದು ಕಡ್ಡಾಯವಾಗಿದ್ದು, ಈ ನಿಯಮವು ಸರ್ಕಾರಿ, ಅನುದಾನಿತ, ಖಾಸಗಿ ಹಾಗೂ ವಸತಿ ಶಾಲೆಗಳು ಸೇರಿದಂತೆ ರಾಜ್ಯದ ಎಲ್ಲ ಶಾಲೆಗಳಿಗೂ ಅನ್ವಯವಾಗುತ್ತದೆ.
ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಮನವಿಗೆ ಸ್ಪಂದಿಸಿದ ಶಿಕ್ಷಣ ಇಲಾಖೆ ಈ ನಿರ್ಧಾರ ಕೈಗೊಂಡಿದೆ. ಈಗಾಗಲೇ ಕೆಲವು ಶಾಲೆಗಳಲ್ಲಿ ಪ್ರಾರ್ಥನೆ ವೇಳೆ ಪತ್ರಿಕೆ ಓದುವ ಪದ್ಧತಿ ಇದ್ದರೂ, ಇನ್ನು ಮುಂದೆ ಪ್ರಾರ್ಥನೆಯ ನಂತರ ಪ್ರತ್ಯೇಕವಾಗಿ 10–15 ನಿಮಿಷಗಳನ್ನು ದಿನಪತ್ರಿಕೆ ಓದುವುದಕ್ಕಾಗಿಯೇ ಮೀಸಲಿಡಬೇಕು ಎಂದು ಸುತ್ತೋಲೆಯಲ್ಲಿ ಸ್ಪಷ್ಟಪಡಿಸಲಾಗಿದೆ.
ಈ ಕ್ರಮದಿಂದ ವಿದ್ಯಾರ್ಥಿಗಳಲ್ಲಿ ಓದುವ ಹವ್ಯಾಸ ಬೆಳೆಸುವ ಜೊತೆಗೆ ಮೊಬೈಲ್‌ಗಳ ಅತಿಯಾದ ಬಳಕೆಯನ್ನು ಕಡಿಮೆ ಮಾಡಲು ಸಹಕಾರಿಯಾಗಲಿದೆ. ಜೊತೆಗೆ ಪ್ರಸ್ತುತ ವಿದ್ಯಮಾನಗಳ ಬಗ್ಗೆ ಅರಿವು ಮೂಡಿಸಿ, ಭವಿಷ್ಯದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸುವಲ್ಲಿ ಈ ನಿರ್ಧಾರ ನೆರವಾಗಲಿದೆ ಎಂದು ಇಲಾಖೆ ನಿರೀಕ್ಷಿಸಿದೆ.



