ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ 30ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ನಡೆದಿದೆ.
ತಾಳಬೆಟ್ಟದ ಪೊನ್ನಾಚಿ ತಿರುವಿನ ಬಳಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ ಬದಿಗೆ ಪಲ್ಟಿಯಾಗಿದ್ದು, ಘಟನೆಯಿಂದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾಯಿತು.
ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗಾಯಗೊಂಡ ಪ್ರಯಾಣಿಕರನ್ನು ತಕ್ಷಣವೇ ರಕ್ಷಿಸಿ ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಯ ಹಿನ್ನೆಲೆ ಕೆಲವು ಸಮಯ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿ, ರಸ್ತೆಯಲ್ಲಿ ಕಿಲೋಮೀಟರ್‌ಗಟ್ಟಲೆ ಸಂಚಾರ ದಟ್ಟಣೆ ನಿರ್ಮಾಣವಾಗಿತ್ತು. ಅಪಘಾತಕ್ಕೆ ನಿಖರ ಕಾರಣ ಏನು ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.



