ದಾವಣಗೆರೆ: ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದ ಮಾಜಿ ಪೀಠಾಧಿಪತಿ ಶ್ರೀ ವಚನಾನಂದ ಸ್ವಾಮೀಜಿ ವಿರುದ್ಧ ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
ಗುರುಪೀಠದಲ್ಲಿ ಶಿಕ್ಷಣ ಪಡೆಯುತ್ತಿದ್ದ ಬಾಲಕನ ಮೇಲೆ ದೌರ್ಜನ್ಯ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಮೊದಲು ಜೀರೋ ಎಫ್‌ಐಆರ್ ದಾಖಲಾಗಿತ್ತು. ನಂತರ ಪ್ರಕರಣವನ್ನು ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ.
ಸಂತ್ರಸ್ತ ಬಾಲಕನ ತಾಯಿ ನೀಡಿದ ದೂರಿನ ಪ್ರಕಾರ, ಗುರುಪೀಠದಲ್ಲಿ ಇದ್ದ ವೇಳೆ ಬಾಲಕನಿಂದ ಸ್ವಾಮೀಜಿ ಮಸಾಜ್ ಮಾಡಿಸಿಕೊಳ್ಳುತ್ತಿದ್ದರು ಎಂದು ಆರೋಪಿಸಲಾಗಿದೆ. ಈ ದೂರಿನ ಆಧಾರದಲ್ಲಿ ಪೊಲೀಸರು ಫೋಕ್ಸೋ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಎಚ್.ಟಿ. ಶೇಖರ್ ಮಾಹಿತಿ ನೀಡಿದ್ದು, ದೂರುದಾರರ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದೇವೆ. ಸಂತ್ರಸ್ತ ಬಾಲಕನ ಹೇಳಿಕೆಯನ್ನೂ ಪಡೆಯಲಾಗುವುದು. ಪ್ರಕರಣದ ಸಂಪೂರ್ಣ ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.
ಶ್ರೀ ವಚನಾನಂದ ಸ್ವಾಮೀಜಿಯನ್ನು ಇತ್ತೀಚೆಗೆ ಗುರುಪೀಠ ಟ್ರಸ್ಟ್ ಪದಚ್ಯುತಿಗೊಳಿಸಿತ್ತು. ಮಕ್ಕಳಿಂದ ಮಸಾಜ್ ಮಾಡಿಸಿಕೊಳ್ಳುತ್ತಿದ್ದರು ಎಂಬ ಆರೋಪಗಳು ಹೊರಬಿದ್ದ ಬಳಿಕ ಟ್ರಸ್ಟ್ ಈ ನಿರ್ಧಾರ ಕೈಗೊಂಡಿತ್ತು.
ಈ ಬೆಳವಣಿಗೆಯ ಬೆನ್ನಲ್ಲೇ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧಿಕಾರಿಗಳು ಗುರುಪೀಠಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಸ್ವಾಮೀಜಿ ಸೇರಿದಂತೆ ಹಲವು ಮಂದಿಯ ಹೇಳಿಕೆಗಳನ್ನು ದಾಖಲಿಸಿಕೊಂಡಿರುವ ಅಧಿಕಾರಿಗಳು ಪ್ರಕರಣದ ಕುರಿತು ವರದಿ ಸಿದ್ಧಪಡಿಸಿದ್ದಾರೆ.



