ಬೆಂಗಳೂರು: ಪ್ರೀತಿಸಿದ ಯುವತಿಯನ್ನು ಮದುವೆ ಮಾಡಿಕೊಡಲು ಪೋಷಕರು ನಿರಾಕರಿಸಿದ ಕಾರಣಕ್ಕೆ ಮನನೊಂದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತರನ್ನು ರಾಮ್ ಕುಮಾರ್ (25) ಎಂದು ಗುರುತಿಸಲಾಗಿದೆ. ಜಕ್ಕೂರಿನ ಶ್ರೀರಾಂಪುರದಲ್ಲಿ ವಾಸವಿದ್ದ ಈತ ಅನ್ಯಜಾತಿಯ ಯುವತಿಯನ್ನು ಪ್ರೀತಿಸುತ್ತಿದ್ದನು ಎಂದು ತಿಳಿದುಬಂದಿದೆ. ಆದರೆ ಜಾತಿ ಬೇರೆ ಎಂಬ ಕಾರಣಕ್ಕೆ ಪೋಷಕರು ವಿವಾಹಕ್ಕೆ ವಿರೋಧ ವ್ಯಕ್ತಪಡಿಸಿದ್ದರು ಎಂದು ಹೇಳಲಾಗಿದೆ.
ಈ ಕಾರಣದಿಂದ ಮನನೊಂದ ರಾಮ್ ಕುಮಾರ್, ಪೋಷಕರು ಕೆಲಸಕ್ಕೆ ತೆರಳಿದ್ದ ವೇಳೆ ಮನೆಯ ಕೋಣೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಂತರ ಪೋಷಕರು ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ತಕ್ಷಣ ಆಸ್ಪತ್ರೆಗೆ ಕರೆದೊಯ್ದರೂ ಯುವಕನನ್ನು ಉಳಿಸಲು ಸಾಧ್ಯವಾಗಲಿಲ್ಲ ಎಂದು ತಿಳಿದುಬಂದಿದೆ.
ಘಟನೆ ಸಂಬಂಧ ಅಮೃತಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.



