ಬೆಂಗಳೂರು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಗುಡುಗು, ಮಿಂಚು ಹಾಗೂ ಬಿರುಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಭಾಗಗಳಿಗೆ ಆರೆಂಜ್ ಅಲರ್ಟ್ ಹಾಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಐಎಂಡಿ ಮಾಹಿತಿ ಪ್ರಕಾರ, ಉತ್ತರ ಒಳನಾಡು ಕರ್ನಾಟಕದಲ್ಲಿ ಮೇ 17ರವರೆಗೆ ಗಂಟೆಗೆ 40ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಜೊತೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಮಿಂಚು ಹಾಗೂ ಬಿರುಗಾಳಿಯಿಂದ ಕೆಲ ಪ್ರದೇಶಗಳಲ್ಲಿ ಅಪಾಯಕಾರಿ ಪರಿಸ್ಥಿತಿ ನಿರ್ಮಾಣವಾಗುವ ಸಾಧ್ಯತೆಯಿರುವುದರಿಂದ ಜನರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.
ಮೇ 18ರಂದು ಗಾಳಿಯ ವೇಗದಲ್ಲಿ ಸ್ವಲ್ಪ ಇಳಿಕೆ ಕಂಡುಬರುವ ನಿರೀಕ್ಷೆಯಿದ್ದರೂ, ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಮುಂದುವರಿಯಲಿದೆ.
ದಕ್ಷಿಣ ಒಳನಾಡು ಕರ್ನಾಟಕದಲ್ಲಿಯೂ ಇದೇ ಅವಧಿಯಲ್ಲಿ ಗಂಟೆಗೆ 40ರಿಂದ 50 ಕಿಲೋಮೀಟರ್ ವೇಗದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಶೇ.50ಕ್ಕಿಂತ ಹೆಚ್ಚು ಪ್ರದೇಶಗಳಲ್ಲಿ ಗುಡುಗು ಮತ್ತು ಮಿಂಚಿನೊಂದಿಗೆ ಮಳೆಯಾಗುವ ಸಾಧ್ಯತೆಯಿರುವುದರಿಂದ ಮುಕ್ಕಾಲು ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ತಜ್ಞ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.
ಯಾದಗಿರಿ, ರಾಯಚೂರು, ಬಾಗಲಕೋಟೆ, ಕೊಪ್ಪಳ, ಧಾರವಾಡ, ಗದಗ, ಬಳ್ಳಾರಿ, ವಿಜಯನಗರ, ಹಾವೇರಿ, ದಾವಣಗೆರೆ, ಶಿವಮೊಗ್ಗ, ಚಿತ್ರದುರ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ತುಮಕೂರು, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.



