ಮುಂಬೈ: ಭಾರೀ ಚರ್ಚೆಗೆ ಕಾರಣವಾಗಿರುವ ಬಾಲಿವುಡ್ ಸಿನಿಮಾ ‘ಆಖ್ರಿ ಸವಾಲ್’ ಇದೀಗ ಪ್ರೇಕ್ಷಕರನ್ನು ಸೆಳೆಯಲು ವಿಶೇಷ ತಂತ್ರ ಅನುಸರಿಸಿದೆ. ಚಿತ್ರತಂಡ ‘ಒಂದು ಟಿಕೆಟ್ ಖರೀದಿಸಿದರೆ ಮತ್ತೊಂದು ಉಚಿತ’ ಆಫರ್ ಘೋಷಿಸಿದ್ದು, ಸಿನಿಪ್ರೇಮಿಗಳ ಗಮನ ಸೆಳೆಯುತ್ತಿದೆ.
ಚಿತ್ರದ ನಿರ್ಮಾಪಕ ನಿಖಿಲ್ ನಂದಾ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದು, AAKHRISAWAL ಪ್ರೋಮೋ ಕೋಡ್ ಬಳಸಿ ಟಿಕೆಟ್ ಬುಕ್ ಮಾಡಿದರೆ Buy 1 Get 1 Free ಆಫರ್ ದೊರೆಯಲಿದೆ ಎಂದು ತಿಳಿಸಿದ್ದಾರೆ.
ಆರ್‌ಎಸ್‌ಎಸ್ ಹಿನ್ನೆಲೆ, ರಾಜಕೀಯ ಟಚ್ ಮತ್ತು ತನಿಖಾ ಶೈಲಿಯ ಕಥಾಹಂದರದಿಂದ ಸಿನಿಮಾ ಈಗಾಗಲೇ ರಾಷ್ಟ್ರ ಮಟ್ಟದಲ್ಲಿ ಚರ್ಚೆಗೆ ಕಾರಣವಾಗಿದೆ. ಟ್ರೇಲರ್ ಬಿಡುಗಡೆಯಾದ ಕ್ಷಣದಿಂದಲೇ ಸಿನಿಮಾ ಪರ-ವಿರೋಧ ಚರ್ಚೆಗಳು ಜೋರಾಗಿದ್ದವು.
ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಸೇರಿದಂತೆ ಹಲವು ಗಣ್ಯರು ಚಿತ್ರದ ವಿಶೇಷ ಪ್ರದರ್ಶನ ವೀಕ್ಷಿಸಿದ್ದಾರೆ. ದೆಹಲಿಯಲ್ಲಿ ನಡೆದ ಪ್ರೀಮಿಯರ್ ಶೋಗೆ ಪ್ರಮುಖ ರಾಜಕೀಯ ನಾಯಕರು ಭಾಗಿಯಾಗಿದ್ದು, ರಾಷ್ಟ್ರಪತಿ ಭವನದಲ್ಲೂ ಸಿನಿಮಾ ಪ್ರದರ್ಶನಗೊಂಡಿದೆ ಎಂಬ ಮಾಹಿತಿ ಹೊರಬಂದಿದೆ.
ಆದರೆ ಚಿತ್ರದ ವಿರುದ್ಧ ವಿವಾದವೂ ಮುಂದುವರಿದಿದೆ. ಯುಎಇ ಸೆನ್ಸಾರ್ ಮಂಡಳಿ ಕೆಲವು ದೃಶ್ಯಗಳನ್ನು ತೆಗೆದುಹಾಕುವಂತೆ ಸೂಚಿಸಿತ್ತು. ಆದರೆ ಮೂಲ ಕಥೆಗೆ ಧಕ್ಕೆಯಾಗುತ್ತದೆ ಎಂದು ನಿರ್ಮಾಪಕರು ಬದಲಾವಣೆ ಮಾಡಲು ನಿರಾಕರಿಸಿದ ಹಿನ್ನೆಲೆ ಯುಎಇನಲ್ಲಿ ಚಿತ್ರ ಬಿಡುಗಡೆ ಸ್ಥಗಿತಗೊಂಡಿದೆ.
ಚಿತ್ರದ ಕೆಲವು ಅಂಶಗಳನ್ನು ಪ್ರಶ್ನಿಸಿ ನ್ಯಾಯಾಲಯದಲ್ಲೂ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ದಾಖಲಾಗಿದ್ದು, ಸಿನಿಮಾ ಸದ್ಯ ಬಾಕ್ಸ್ ಆಫೀಸ್ ಜೊತೆಗೆ ರಾಜಕೀಯ ವಲಯದಲ್ಲೂ ಚರ್ಚೆಯ ಕೇಂದ್ರಬಿಂದುವಾಗಿದೆ.



