ಬೆಂಗಳೂರು: ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಮದ್ಯ ಸಾಗಣೆ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ವಿಧಿಸಲಾಗಿದ್ದ ಒಂದು ವರ್ಷದ ಶಿಕ್ಷೆಯನ್ನು ಕರ್ನಾಟಕ ಹೈಕೋರ್ಟ್ ಎತ್ತಿಹಿಡಿದಿದೆ. ಜೊತೆಗೆ ಆರೋಪಿಗಳು ಸಲ್ಲಿಸಿದ್ದ ಕ್ರಿಮಿನಲ್ ಮರುಪರಿಶೀಲನಾ ಅರ್ಜಿಯನ್ನು ವಜಾಗೊಳಿಸಿದೆ.
ಆರೋಪಿಗಳಾದ ಮಂಜನಾಯ್ಕ ಹಾಗೂ ಶಂಕರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿ. ಶ್ರೀಷಾನಂದ ಅವರ ಏಕಸದಸ್ಯ ಪೀಠ ಈ ಆದೇಶ ನೀಡಿದೆ.
ಪ್ರಕರಣದಲ್ಲಿ ಪೊಲೀಸರು ವಶಪಡಿಸಿಕೊಂಡಿದ್ದ ಭಾರಿ ಪ್ರಮಾಣದ ಮದ್ಯಕ್ಕೆ ಸಂಬಂಧಿಸಿದಂತೆ ಯಾವುದೇ ಸೂಕ್ತ ದಾಖಲೆಗಳನ್ನು ಆರೋಪಿಗಳು ಒದಗಿಸಿಲ್ಲ. ಅಲ್ಲದೆ ಸಾಕ್ಷಿಗಳ ಹೇಳಿಕೆಗಳು ಸಹ ಪ್ರಾಸಿಕ್ಯೂಷನ್ ಪರವಾಗಿಯೇ ಸಾಬೀತಾಗಿವೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
ರಸ್ತೆಯಲ್ಲಿ ಸಂಚರಿಸುವ ವಾಹನಗಳ ತಪಾಸಣೆ ನಡೆಸಲು ಪೊಲೀಸರಿಗೆ ಪ್ರತ್ಯೇಕ ಸರ್ಚ್ ವಾರಂಟ್ ಕಡ್ಡಾಯವಲ್ಲ ಎಂದು ಪೀಠ ಸ್ಪಷ್ಟಪಡಿಸಿದೆ.
ಪ್ರಕರಣದ ತನಿಖೆ ನಡೆಸಿದ ಪೊಲೀಸರು ಹಾಗೂ ನ್ಯಾಯಾಲಯದಲ್ಲಿ ಸಾಕ್ಷ್ಯ ನೀಡಿದ ಸಾಕ್ಷಿಗಳಿಗೆ ಆರೋಪಿಗಳ ವಿರುದ್ಧ ಯಾವುದೇ ವೈಯಕ್ತಿಕ ದ್ವೇಷವಿಲ್ಲ. ಹೀಗಾಗಿ ಆರೋಪಿಗಳನ್ನು ಉದ್ದೇಶಪೂರ್ವಕವಾಗಿ ಸಿಲುಕಿಸಲಾಗಿದೆ ಎಂಬ ವಾದವನ್ನು ಒಪ್ಪಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ತಿಳಿಸಿದೆ.
ಜೊತೆಗೆ ಶಿಕ್ಷೆಗೆ ಗುರಿಯಾದ ಆರೋಪಿಗಳು 2026ರ ಜೂನ್ 5ರೊಳಗೆ ವಿಚಾರಣಾ ನ್ಯಾಯಾಲಯದ ಮುಂದೆ ಶರಣಾಗಬೇಕು ಎಂದು ಆದೇಶಿಸಲಾಗಿದೆ.
ಪ್ರಕರಣದ ಹಿನ್ನೆಲೆ
2014ರ ಸೆಪ್ಟೆಂಬರ್ 14ರಂದು ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಹರಪನಹಳ್ಳಿ ಸಮೀಪ ಮೋಟಾರ್‌ಸೈಕಲ್‌ನಲ್ಲಿ ಯಾವುದೇ ಪರವಾನಗಿ ಇಲ್ಲದೆ ಪ್ಲಾಸ್ಟಿಕ್ ಚೀಲಗಳಲ್ಲಿ ಸುಮಾರು ₹13,200 ಮೌಲ್ಯದ ರಾಜಾ ವಿಸ್ಕಿ ಪ್ಯಾಕೆಟ್‌ಗಳನ್ನು ಸಾಗಿಸುತ್ತಿದ್ದ ಆರೋಪಿಗಳನ್ನು ಬಂಧಿಸಲಾಗಿತ್ತು.
ಬಳಿಕ ತನಿಖೆ ನಡೆಸಿದ ಪೊಲೀಸರು ಕರ್ನಾಟಕ ಅಬಕಾರಿ ಕಾಯ್ದೆಯ ಸೆಕ್ಷನ್ 32 ಮತ್ತು 34ರಡಿ ಆರೋಪಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ಅರಸೀಕೆರೆಯ ಜೆಎಂಎಫ್‌ಸಿ ನ್ಯಾಯಾಲಯ ಆರೋಪಿಗಳಿಗೆ ತಲಾ ಒಂದು ವರ್ಷದ ಸರಳ ಕಾರಾಗೃಹ ಶಿಕ್ಷೆ ಹಾಗೂ ₹10 ಸಾವಿರ ದಂಡ ವಿಧಿಸಿತ್ತು.
ಈ ತೀರ್ಪನ್ನು ಹಾಸನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವೂ ಎತ್ತಿಹಿಡಿದಿತ್ತು. ಇದನ್ನು ಪ್ರಶ್ನಿಸಿ ಆರೋಪಿಗಳು ಹೈಕೋರ್ಟ್‌ಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಿದ್ದರು.
ವಿಚಾರಣೆ ವೇಳೆ ಆರೋಪಿಗಳ ಪರ ವಕೀಲರು, ದಾಳಿಗೂ ಮುನ್ನ ಪೊಲೀಸರು ಸರ್ಚ್ ವಾರಂಟ್ ಪಡೆಯದ ಕಾರಣ ವಿಚಾರಣಾ ನ್ಯಾಯಾಲಯದ ಆದೇಶ ರದ್ದುಪಡಿಸಬೇಕು ಎಂದು ವಾದಿಸಿದ್ದರು. ಆದರೆ ಈ ವಾದವನ್ನು ಹೈಕೋರ್ಟ್ ತಳ್ಳಿ ಹಾಕಿದೆ.



