ಚಿಕ್ಕೋಡಿ: ಲಾರಿ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ–ಗೋಟುರ ರಸ್ತೆಯಲ್ಲಿ ನಡೆದಿದೆ.
ಮಹಾರಾಷ್ಟ್ರದ ಪೂನಾ ಮೂಲದ ಹಣಮಂತ ಪಾಯಾಳ (55) ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ. ಅಪಘಾತದ ತೀವ್ರತೆಗೆ ಕಾರು ನಜ್ಜುಗುಜ್ಜಾಗಿದ್ದು, ಸ್ಥಳದಲ್ಲೇ ಒಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯಲ್ಲಿ ಗಾಯಗೊಂಡ ಮೂವರನ್ನು ಹೆಚ್ಚಿನ ಚಿಕಿತ್ಸೆಗೆ ಬೆಳಗಾವಿ ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತದ ಮಾಹಿತಿ ತಿಳಿದು ಸ್ಥಳಕ್ಕೆ ಸಂಕೇಶ್ವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂಬಂಧ ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.



