ಪಾಟ್ನಾ: ಬಿಹಾರದ ಮುಜಫರ್‌ಪುರದಲ್ಲಿರುವ ಖಾಸಗಿ ಆಸ್ಪತ್ರೆಯ ಐಸಿಯು ವಿಭಾಗದಲ್ಲಿ ಸಂಭವಿಸಿದ ಭೀಕರ ಬೆಂಕಿ ಅವಘಡದಲ್ಲಿ ಐವರು ರೋಗಿಗಳು ಸಾವನ್ನಪ್ಪಿದ್ದು, 25ಕ್ಕೂ ಹೆಚ್ಚು ಜನರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ.
ಆಸ್ಪತ್ರೆಯ ಐದನೇ ಮಹಡಿಯಲ್ಲಿರುವ ಐಸಿಯುನಲ್ಲಿ ನಡುರಾತ್ರಿ ವೇಳೆ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಹೊಗೆ ಇಡೀ ಮಹಡಿಯನ್ನು ಆವರಿಸಿತ್ತು.
ಮುಜಫರ್‌ಪುರದ ಪ್ರಸಾದ್ ಆಸ್ಪತ್ರೆಯಲ್ಲಿ ಗುರುವಾರ ಮುಂಜಾನೆ ಸುಮಾರು 3.55ರ ವೇಳೆಗೆ ಈ ದುರಂತ ಸಂಭವಿಸಿದೆ. ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 95 ವರ್ಷದ ರಾಧಾ ದೇವಿ ಎಂಬ ವೃದ್ಧೆ ಮೊದಲು ಬೆಂಕಿಯನ್ನು ಗಮನಿಸಿ ಆಸ್ಪತ್ರೆ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಅವರ ಸಮಯಪ್ರಜ್ಞೆಯಿಂದ ಆಸ್ಪತ್ರೆ ಸಿಬ್ಬಂದಿ ಹಾಗೂ ಇತರ ರೋಗಿಗಳಿಗೆ ತಕ್ಷಣ ಎಚ್ಚರಿಕೆ ನೀಡಲು ಸಾಧ್ಯವಾಗಿದ್ದು, ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ.
ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಬೆಂಕಿಯನ್ನು ನಿಯಂತ್ರಣಕ್ಕೆ ತರುವ ಜೊತೆಗೆ ರೋಗಿಗಳು ಮತ್ತು ಆಸ್ಪತ್ರೆಯಲ್ಲಿದ್ದ ಇತರರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಯಿತು. ಆದಾಗ್ಯೂ, ಐವರು ರೋಗಿಗಳು ಬೆಂಕಿ ಮತ್ತು ಹೊಗೆಯ ಪರಿಣಾಮದಿಂದ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜಿಲ್ಲಾ ಮ್ಯಾಜಿಸ್ಟ್ರೇಟ್ ಮಾಹಿತಿ ಪ್ರಕಾರ, ಅವಘಡ ಸಂಭವಿಸಿದ ವೇಳೆ ಐಸಿಯುನಲ್ಲಿ 13ರಿಂದ 15 ಮಂದಿ ಚಿಕಿತ್ಸೆ ಪಡೆಯುತ್ತಿದ್ದರು. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಘಟನೆಯ ನಿಖರ ಕಾರಣವನ್ನು ಪತ್ತೆಹಚ್ಚಲು ತನಿಖೆ ಆರಂಭಿಸಲಾಗಿದೆ. ಆಸ್ಪತ್ರೆಯ ಅಗ್ನಿ ಸುರಕ್ಷತಾ ವ್ಯವಸ್ಥೆಗಳ ಬಗ್ಗೆಯೂ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಆಸ್ಪತ್ರೆಗಳು ಹಾಗೂ ವಾಣಿಜ್ಯ ಕಟ್ಟಡಗಳಲ್ಲಿ ಅಗ್ನಿ ಅವಘಡಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಘಟನೆ ಮತ್ತೊಮ್ಮೆ ಸುರಕ್ಷತಾ ಕ್ರಮಗಳ ಕುರಿತು ಪ್ರಶ್ನೆಗಳನ್ನು ಎಬ್ಬಿಸಿದೆ. ನಿನ್ನೆಯಷ್ಟೇ ದೆಹಲಿಯ ಮಾಳವೀಯ ನಗರದಲ್ಲಿರುವ ಹೋಟೆಲ್‌ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 17 ವಿದೇಶಿಯರು ಸೇರಿದಂತೆ 21 ಮಂದಿ ಮೃತಪಟ್ಟಿದ್ದರು. ಇದೀಗ ಬಿಹಾರದ ಆಸ್ಪತ್ರೆಯಲ್ಲಿ ಸಂಭವಿಸಿರುವ ಈ ದುರಂತ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.



