ಚಿಕ್ಕಬಳ್ಳಾಪುರ: ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಜಂಗಮಕೋಟೆ ಹೋಬಳಿಯ 13 ಹಳ್ಳಿಗಳ ಸುಮಾರು 2,800 ಎಕರೆ ಜಮೀನನ್ನು ಕೆಐಎಡಿಬಿ ಭೂಸ್ವಾಧೀನ ಮಾಡಿಕೊಳ್ಳಬಾರದು ಎಂದು ಆಗ್ರಹಿಸಿ ರೈತರು ಬೃಹತ್ ಬೈಕ್ ರ‍್ಯಾಲಿ ನಡೆಸಿದರು.
ಕಳೆದ 81 ದಿನಗಳಿಂದ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಎದುರು ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದ ರೈತರು ಇಂದು ಬೆಂಗಳೂರಿನ ವಿಧಾನಸೌಧದತ್ತ ಬೈಕ್ ರ‍್ಯಾಲಿ ಮೂಲಕ ಹೊರಟಿದ್ದರು. ಸಾವಿರಾರು ರೈತರು ಈ ರ‍್ಯಾಲಿಯಲ್ಲಿ ಭಾಗವಹಿಸಿದ್ದರು.
ಸಂಭಾವ್ಯ ಪರಿಸ್ಥಿತಿಯನ್ನು ಗಮನದಲ್ಲಿಟ್ಟು ಚಿಕ್ಕಬಳ್ಳಾಪುರ ಪೊಲೀಸರು 500ಕ್ಕೂ ಹೆಚ್ಚು ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಿದ್ದರು. ಆದರೆ ಅಣಕನೂರು ಬಳಿ ಬೈಕ್ ರ‍್ಯಾಲಿಯನ್ನು ಪೊಲೀಸರು ತಡೆದರು. ಇದರಿಂದ ರೈತರು ರಸ್ತೆ ಮಧ್ಯದಲ್ಲೇ ಕುಳಿತು ಮೂರು ಗಂಟೆಗಳ ಕಾಲ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಸ್ಥಳಕ್ಕೆ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಜಿ ಪ್ರಭು ಆಗಮಿಸಿ ರೈತರೊಂದಿಗೆ ಮಾತುಕತೆ ನಡೆಸಿ ಮನವೊಲಿಸಿದರು. ಬಳಿಕ ಎರಡು ವಾರಗಳೊಳಗೆ ಕೆಐಎಡಿಬಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸಮಸ್ಯೆ ಪರಿಹರಿಸುವ ಭರವಸೆ ನೀಡಿದರು.
ಈ ಭರವಸೆಯ ಬಳಿಕ ರೈತರು ತಮ್ಮ ಪ್ರತಿಭಟನೆಯನ್ನು ಹಿಂತೆಗೆದುಕೊಂಡರು.



