ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ಇಬ್ಬರು ಭ್ರಷ್ಟ ಅಧಿಕಾರಿಗಳನ್ನು ಲಂಚದ ಹಣ ಸಹಿತ ವಶಕ್ಕೆ ಪಡೆದಿದ್ದಾರೆ.
ಬೆಂಗಳೂರು ದಕ್ಷಿಣ ವಿಭಾಗದ ಉಪ ಮುಖ್ಯ ವಿದ್ಯುತ್ ನಿರೀಕ್ಷಕ ಸಿದ್ದಪ್ಪ ಅವರು ಅಪಾರ್ಟ್‌ಮೆಂಟ್ ಪರಿಶೀಲನೆ ವರದಿ ನೀಡಲು 20,000 ರೂಪಾಯಿ ಲಂಚ ಬೇಡಿಕೆ ಇಟ್ಟಿದ್ದ ಆರೋಪದಡಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ದೂರುದಾರರಾದ ರಘುರಾಜ್ ಹಾಗೂ ನಾಗರಾಜ್ ಅವರು ಲೋಕಾಯುಕ್ತ ಪೊಲೀಸರಿಗೆ ನೀಡಿದ ಮಾಹಿತಿಯ ಆಧಾರದ ಮೇಲೆ ಕಾರ್ಯಾಚರಣೆ ನಡೆಸಲಾಗಿದೆ.
ಲೋಕಾಯುಕ್ತ ಯೋಜನೆಯಂತೆ ದೂರುದಾರರು ಅಧಿಕಾರಿ ಸಿದ್ದಪ್ಪ ಅವರಿಗೆ ಹಣ ಹಸ್ತಾಂತರಿಸುತ್ತಿದ್ದ ವೇಳೆ ದಾಳಿ ನಡೆಸಿದ ಅಧಿಕಾರಿಗಳು ಅವರನ್ನು ಸ್ಥಳದಲ್ಲೇ ಬಂಧಿಸಿದ್ದಾರೆ. ಲಂಚದ ಹಣವನ್ನು ಕೂಡ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.
ಇದೇ ವೇಳೆ ನಾಗರಭಾವಿಯಲ್ಲಿರುವ ಕಾನೂನು ಮಾಪನಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕಿ ಎಂ.ಎಸ್. ವಾಣಿಶ್ರೀ ಕೂಡ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮೊಬೈಲ್ ಆಕ್ಸೆಸರೀಸ್ ಪ್ಯಾಕೇಜಿಂಗ್ ಪರವಾನಗಿ ನೀಡಲು 10,000 ರೂಪಾಯಿ ಲಂಚ ಬೇಡಿಕೆ ಇಟ್ಟಿದ್ದರು ಎಂಬ ಆರೋಪ ಇದೆ.
ಲೋಕಾಯುಕ್ತ ಎಸ್‌ಪಿ ಶಿವಪ್ರಕಾಶ್ ದೇವರಾಜ್ ನೇತೃತ್ವದ ತಂಡ ಕಚೇರಿಗೆ ದಾಳಿ ನಡೆಸಿ, ಮೊದಲ ಕಂತಿನ 5,000 ರೂಪಾಯಿ ಲಂಚದ ಹಣ ಸಹಿತ ಅಧಿಕಾರಿಯನ್ನು ವಶಕ್ಕೆ ಪಡೆದಿದೆ.
ಈ ಸಂಬಂಧ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಪ್ರಕರಣ ದಾಖಲಿಸಿ ಮುಂದಿನ ತನಿಖೆ ಮುಂದುವರಿಸಲಾಗಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.



