ಬೆಂಗಳೂರು: ರಾಜ್ಯ ಸರ್ಕಾರ ವಿದ್ಯುತ್ ಕ್ಷೇತ್ರದ ಖಾಸಗೀಕರಣಕ್ಕೆ ಅವಕಾಶ ನೀಡಬಾರದು ಹಾಗೂ ರೈತರು ಬೀದಿಗಿಳಿದು ಹೋರಾಟ ನಡೆಸುವಂತಹ ಪರಿಸ್ಥಿತಿ ಸೃಷ್ಟಿಸಬಾರದು ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಸಂಸದ ಗೋವಿಂದ ಕಾರಜೋಳ ಆಗ್ರಹಿಸಿದ್ದಾರೆ.
ನಗರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ಕಂಪನಿಗಳಿಗೆ ಅವಕಾಶ ನೀಡುವ ಪ್ರಕ್ರಿಯೆಯಿಂದ ರೈತರಲ್ಲಿ ಆತಂಕ ಹೆಚ್ಚಾಗಿದೆ ಎಂದು ಹೇಳಿದರು.
ಟಾಟಾ ಪವರ್ ಸೇರಿದಂತೆ ಖಾಸಗಿ ಸಂಸ್ಥೆಗಳಿಗೆ ವಿದ್ಯುತ್ ವಿತರಣೆಯಲ್ಲಿ ಅವಕಾಶ ಕಲ್ಪಿಸುವ ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ರೈತ ಸಮುದಾಯದಲ್ಲಿ ಅಸಮಾಧಾನ ವ್ಯಕ್ತವಾಗುತ್ತಿದೆ ಎಂದು ಅವರು ಅಭಿಪ್ರಾಯಪಟ್ಟರು.
ಖಾಸಗಿ ಕಂಪನಿಗಳು ಲಾಭದ ಉದ್ದೇಶದಿಂದ ಕಾರ್ಯನಿರ್ವಹಿಸುತ್ತವೆ. ವಿದ್ಯುತ್ ಲೈನ್ ಅಥವಾ ಟ್ರಾನ್ಸ್‌ಫಾರ್ಮರ್ (ಟಿಸಿ) ಹಾನಿಗೊಳಗಾದರೆ, ಅದರ ದುರಸ್ತಿಗಾಗಿ ರೈತರು ಹೆಚ್ಚಿನ ಮೊತ್ತವನ್ನು ಪಾವತಿಸಬೇಕಾಗುವ ಸಾಧ್ಯತೆ ಇದೆ ಎಂದು ಕಾರಜೋಳ ಹೇಳಿದರು.
ರೈತರಿಗೆ ಐಪಿ ಸೆಟ್ ಸಂಪರ್ಕ ಹಾಗೂ ಟ್ರಾನ್ಸ್‌ಫಾರ್ಮರ್ ಅಳವಡಿಕೆಗೆ ಪ್ರಸ್ತುತ ₹2.5 ಲಕ್ಷದಿಂದ ₹3 ಲಕ್ಷದವರೆಗೆ ವೆಚ್ಚವಾಗುತ್ತಿದೆ ಎಂದು ಆರೋಪಿಸಿದ ಅವರು, ಖಾಸಗಿ ಕಂಪನಿಗಳ ಹಸ್ತಕ್ಷೇಪ ಹೆಚ್ಚಾದರೆ ಈ ವೆಚ್ಚ ಇನ್ನಷ್ಟು ಏರಿಕೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಸಿದರು.
ಬಿಜೆಪಿ ಆಡಳಿತದ ಅವಧಿಯಲ್ಲಿ ಕಡಿಮೆ ವೆಚ್ಚದಲ್ಲಿ ರೈತರಿಗೆ ಐಪಿ ಸೆಟ್ ಸಂಪರ್ಕ ಹಾಗೂ ಅಗತ್ಯ ವಿದ್ಯುತ್ ಸೌಲಭ್ಯಗಳನ್ನು ಒದಗಿಸಲಾಗುತ್ತಿತ್ತು. ಆದರೆ ಕಳೆದ ಮೂರು ವರ್ಷಗಳಲ್ಲಿ ಪರಿಸ್ಥಿತಿ ಬದಲಾಗಿದ್ದು, ರೈತರು ಹೆಚ್ಚುವರಿ ಆರ್ಥಿಕ ಹೊರೆ ಎದುರಿಸುತ್ತಿದ್ದಾರೆ ಎಂದು ಟೀಕಿಸಿದರು.



