ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ಡಿ.ಕೆ. ಶಿವಕುಮಾರ್ ಅವರಿಗೆ ಆಡಳಿತದ ಆರಂಭಿಕ ಹಂತದಲ್ಲೇ ಹಲವು ಸವಾಲುಗಳು ಎದುರಾಗಿವೆ. ರಾಜ್ಯ ಸಚಿವ ಸಂಪುಟ ಇನ್ನೂ ಪೂರ್ಣ ಪ್ರಮಾಣದಲ್ಲಿ ರಚನೆಯಾಗದಿರುವುದು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ವಿಳಂಬವಾಗಿರುವ ಹಿನ್ನೆಲೆಯಲ್ಲಿ ಆಡಳಿತದ ಬಹುತೇಕ ಜವಾಬ್ದಾರಿ ಸದ್ಯ ಅಧಿಕಾರಿಗಳ ಹೆಗಲಿನ ಮೇಲಿದೆ.
ಈ ಹಿನ್ನೆಲೆ ಆಡಳಿತ ಯಂತ್ರಕ್ಕೆ ಚುರುಕು ನೀಡುವ ಹಾಗೂ ಮುಂಗಾರು ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸುವ ಉದ್ದೇಶದಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹತ್ವದ ಕಾರ್ಯಯೋಜನೆ ರೂಪಿಸಿದ್ದಾರೆ.
ರಾಜ್ಯದಲ್ಲಿ ಮುಂಗಾರು ಮಳೆ ತೀವ್ರಗೊಂಡಿದ್ದು, ಹಲವು ಜಿಲ್ಲೆಗಳಲ್ಲಿ ಪ್ರವಾಹ, ಭೂಕುಸಿತ ಹಾಗೂ ಮೂಲಸೌಕರ್ಯ ಹಾನಿಯ ಆತಂಕ ಎದುರಾಗಿದೆ. ವಿಶೇಷವಾಗಿ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ನಿರಂತರ ಮಳೆಯ ಪರಿಣಾಮ ಗುಡ್ಡ ಕುಸಿತ ಮತ್ತು ಭೂಕುಸಿತದ ಭೀತಿ ಹೆಚ್ಚಾಗಿದೆ.
ಇನ್ನೊಂದೆಡೆ, ಮುಂಗಾರು ಆರಂಭವಾಗಿರುವುದರಿಂದ ರೈತರು ಬಿತ್ತನೆ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಆದರೆ ಹಲವು ಜಿಲ್ಲೆಗಳಲ್ಲಿ ಬಿತ್ತನೆ ಬೀಜ ಹಾಗೂ ರಸಗೊಬ್ಬರದ ಕೊರತೆ ಎದುರಾಗಿರುವುದರಿಂದ ರೈತರಲ್ಲಿ ಅಸಮಾಧಾನ ವ್ಯಕ್ತವಾಗುತ್ತಿದೆ. ಈ ಸಮಸ್ಯೆಗಳ ಪರಿಹಾರಕ್ಕೂ ಸರ್ಕಾರ ಆದ್ಯತೆ ನೀಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ಈ ಹಿನ್ನೆಲೆಯಲ್ಲಿ ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ನೇತೃತ್ವದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು (ಡಿಸಿ), ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು (ಎಸ್ಪಿ) ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಮಹತ್ವದ ವೀಡಿಯೋ ಕಾನ್ಫರೆನ್ಸ್ ಸಭೆ ನಡೆಯಲಿದೆ.
ಸಭೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ನೇರವಾಗಿ ಸೂಚನೆ ನೀಡಲಿರುವ ಮುಖ್ಯಮಂತ್ರಿ, ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕಾರ್ಯನಿರ್ವಹಿಸಲು ನಿರ್ದೇಶನ ನೀಡಲಿದ್ದಾರೆ. ಮಳೆ ಪೀಡಿತ ಜಿಲ್ಲೆಗಳಲ್ಲಿ ತುರ್ತು ಪರಿಸ್ಥಿತಿಗಳನ್ನು ಎದುರಿಸಲು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಸೂಚಿಸುವ ಸಾಧ್ಯತೆ ಇದೆ.
ಕರಾವಳಿ ಭಾಗಗಳಲ್ಲಿ ಭಾರಿ ಮಳೆಯೊಂದಿಗೆ ಚಂಡಮಾರುತದ ಆತಂಕವೂ ಇರುವುದರಿಂದ ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗುತ್ತಿದೆ. ಉತ್ತರ ಕರ್ನಾಟಕದ ನದಿ ಪಾತ್ರದ ಜಿಲ್ಲೆಗಳಲ್ಲಿ ಪ್ರವಾಹದ ಭೀತಿ ಎದುರಾದಲ್ಲಿ ನದಿ ತೀರದ ಗ್ರಾಮಗಳ ನಿವಾಸಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಪೂರ್ವಸಿದ್ಧತೆ ಮಾಡಿಕೊಂಡಿರಬೇಕು ಎಂದು ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡುವ ಸಾಧ್ಯತೆ ಇದೆ.
ಮುಂಗಾರು ಅವಾಂತರಗಳನ್ನು ಸಮರ್ಥವಾಗಿ ಎದುರಿಸುವುದು, ರೈತರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ ನೀಡುವುದು ಹಾಗೂ ಆಡಳಿತ ಯಂತ್ರವನ್ನು ಹೆಚ್ಚು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವಂತೆ ಮಾಡುವುದು ಈ ಸಭೆಯ ಪ್ರಮುಖ ಉದ್ದೇಶವಾಗಿದೆ.



