ಬೆಂಗಳೂರು: ನಗರದ ಮಹತ್ವಾಕಾಂಕ್ಷೆಯ ಆರೆಂಜ್ ಲೈನ್ ಮೆಟ್ರೋ ಯೋಜನೆಗೆ ಸಂಬಂಧಿಸಿದ ಡಬಲ್ ಡೆಕ್ಕರ್ ಫ್ಲೈಓವರ್ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಶೀಘ್ರದಲ್ಲೇ ಅನುಮತಿ ನೀಡುವ ಸಾಧ್ಯತೆಗಳು ಹೆಚ್ಚಾಗಿವೆ. ಈ ಬೆಳವಣಿಗೆಯಿಂದಾಗಿ ಹಲವು ತಿಂಗಳುಗಳಿಂದ ವಿಳಂಬವಾಗಿದ್ದ ಮೆಟ್ರೋ ಕಾಮಗಾರಿಗೆ ಚಾಲನೆ ಸಿಗುವ ನಿರೀಕ್ಷೆ ಮೂಡಿದೆ.
ಕಳೆದ ವರ್ಷದ ಆಗಸ್ಟ್ 10ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಹಳದಿ ಮಾರ್ಗದ ಮೆಟ್ರೋ ಸೇವೆಯನ್ನು ಉದ್ಘಾಟಿಸುವುದರ ಜೊತೆಗೆ ಆರೆಂಜ್ ಲೈನ್ ಮೆಟ್ರೋ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದ್ದರು. ಆದರೂ ಯೋಜನೆಗೆ ಸಂಬಂಧಿಸಿದ ಕಾಮಗಾರಿ ಇದುವರೆಗೆ ಆರಂಭವಾಗಿರಲಿಲ್ಲ.
ಆರೆಂಜ್ ಲೈನ್ ಮಾರ್ಗದಲ್ಲಿ ಮೆಟ್ರೋ ಜೊತೆಗೆ ಡಬಲ್ ಡೆಕ್ಕರ್ ಫ್ಲೈಓವರ್ ನಿರ್ಮಿಸಲು ರಾಜ್ಯ ಸರ್ಕಾರ ಪ್ರಸ್ತಾವನೆ ಸಲ್ಲಿಸಿತ್ತು. ನಗರದ ಸಂಚಾರ ದಟ್ಟಣೆಗೆ ಪರಿಹಾರ ಒದಗಿಸುವ ಉದ್ದೇಶದಿಂದ ಈ ಯೋಜನೆಯನ್ನು ರೂಪಿಸಲಾಗಿತ್ತು. ಆದರೆ ಡಬಲ್ ಡೆಕ್ಕರ್ ಫ್ಲೈಓವರ್ ನಿರ್ಮಾಣದಿಂದ ಖಾಸಗಿ ವಾಹನಗಳ ಬಳಕೆ ಹೆಚ್ಚಾಗಿ, ಮೆಟ್ರೋ ಪ್ರಯಾಣಿಕರ ಸಂಖ್ಯೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂಬ ಕಾರಣ ನೀಡಿ ಕೇಂದ್ರ ನಗರಾಭಿವೃದ್ಧಿ ಇಲಾಖೆ ಆಕ್ಷೇಪ ವ್ಯಕ್ತಪಡಿಸಿತ್ತು.
ಇದೀಗ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇತ್ತೀಚೆಗೆ ದೆಹಲಿಯಲ್ಲಿ ಕೇಂದ್ರ ನಗರಾಭಿವೃದ್ಧಿ ಸಚಿವ ಮನೋಹರ್ ಲಾಲ್ ಖಟ್ಟರ್ ಅವರನ್ನು ಭೇಟಿ ಮಾಡಿ, ಡಬಲ್ ಡೆಕ್ಕರ್ ಕಂ ಮೆಟ್ರೋ ಯೋಜನೆಗೆ ಅನುಮತಿ ನೀಡುವಂತೆ ಮನವಿ ಮಾಡಿದ್ದಾರೆ. ಈ ಕುರಿತು ಸಕಾರಾತ್ಮಕ ಚರ್ಚೆ ನಡೆದಿದ್ದು, ಶೀಘ್ರದಲ್ಲೇ ಕೇಂದ್ರದಿಂದ ಅನುಮೋದನೆ ದೊರೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಮೆಟ್ರೋ ಮೂರನೇ ಹಂತದ ಯೋಜನೆಯಲ್ಲಿ ಎರಡು ಪ್ರಮುಖ ಮಾರ್ಗಗಳಿವೆ. ಜೆ.ಪಿ.ನಗರ 4ನೇ ಹಂತದಿಂದ ಕೆಂಪಾಪುರದವರೆಗೆ ಸುಮಾರು 32.5 ಕಿಲೋಮೀಟರ್ ಉದ್ದದ ಮಾರ್ಗವಿದ್ದು, ಹೊಸಹಳ್ಳಿಯಿಂದ ಮಾಗಡಿ ರಸ್ತೆ ಮಾರ್ಗವಾಗಿ ಕಡಬಗೆರೆಯವರೆಗೆ ಸುಮಾರು 12.15 ಕಿಲೋಮೀಟರ್ ಉದ್ದದ ಮತ್ತೊಂದು ಮಾರ್ಗ ನಿರ್ಮಾಣವಾಗಲಿದೆ.
ಯೋಜನೆ ಜಾರಿಯಾದರೆ ಔಟರ್ ರಿಂಗ್ ರೋಡ್ ಪ್ರದೇಶದ ಸಂಚಾರ ದಟ್ಟಣೆ ಗಣನೀಯವಾಗಿ ಕಡಿಮೆಯಾಗಲಿದೆ. ಜೊತೆಗೆ ಸಾರ್ವಜನಿಕ ಸಾರಿಗೆ ಬಳಕೆ ಹೆಚ್ಚಳ, ವಾಯು ಮಾಲಿನ್ಯ ನಿಯಂತ್ರಣ ಹಾಗೂ ಪೀಣ್ಯ ಕೈಗಾರಿಕಾ ಪ್ರದೇಶ ಸೇರಿದಂತೆ ವಿವಿಧ ಭಾಗಗಳಿಗೆ ಸಂಚಾರ ಸುಗಮವಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.



