ವಿಜಯಸಾಕ್ಷಿ ಸುದ್ದಿ, ಗದಗ: ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆ ಹಾಗೂ ಶೈಕ್ಷಣಿಕ ಸಾಧನೆಗೆ ಶಿಕ್ಷಕರು ಮತ್ತು ಪಾಲಕರ ನಡುವಿನ ಸಮನ್ವಯ ಅತ್ಯಂತ ಅಗತ್ಯವಾಗಿದೆ ಎಂದು ಸ್ಟುಡೆಂಟ್ಸ್ ಎಜ್ಯುಕೇಶನ್ ಸಂಸ್ಥೆಯ ಅಧ್ಯಕ್ಷ ಪ್ರೊ. ರಾಜೇಶ ಕುಲಕರ್ಣಿ ಹೇಳಿದರು.
ನಗರದ ಸ್ಟುಡೆಂಟ್ಸ್ ಎಜ್ಯುಕೇಶನ್ ಸಂಸ್ಥೆಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ನಡೆದ ಪ್ರಸಕ್ತ ಶೈಕ್ಷಣಿಕ ಸಾಲಿನ ಪಾಲಕರ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಕಾಲೇಜಿನ ಮೇಲೆ ವಿಶ್ವಾಸವಿಟ್ಟು ತಮ್ಮ ಮಕ್ಕಳನ್ನು ಶಿಕ್ಷಣಕ್ಕಾಗಿ ಒಪ್ಪಿಸಿರುವ ಎಲ್ಲ ಪಾಲಕರಿಗೆ ಕೃತಜ್ಞತೆ ಸಲ್ಲಿಸಿದ ಅವರು, ಪದವಿ ಪೂರ್ವ ಹಂತವು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಪ್ರಮುಖ ಘಟ್ಟವಾಗಿದ್ದು, ಅವರಿಗೆ ಅಗತ್ಯವಾದ ಜ್ಞಾನ, ಕೌಶಲ್ಯ ಹಾಗೂ ಮೌಲ್ಯಗಳನ್ನು ನೀಡಲು ಸಂಸ್ಥೆ ಬದ್ಧವಾಗಿದೆ ಎಂದು ತಿಳಿಸಿದರು.
ಸಂಸ್ಥೆಯ ನಿರ್ದೇಶಕ ಹಾಗೂ ಭೌತಶಾಸ್ತ್ರ ಉಪನ್ಯಾಸಕರಾದ ಪ್ರೊ. ರೋಹಿತ್ ಒಡೆಯರ್ ಮಾತನಾಡಿ, ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಯ ಜೊತೆಗೆ ಉತ್ತಮ ಮೌಲ್ಯಗಳನ್ನು ಅವರಲ್ಲಿ ಬೆಳೆಸುವುದು ಶಿಕ್ಷಣ ಸಂಸ್ಥೆಯ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಶಿಕ್ಷಕರ ಪ್ರಯತ್ನದ ಜೊತೆಗೆ ಪಾಲಕರ ಸಹಭಾಗಿತ್ವವೂ ಅನಿವಾರ್ಯವಾಗಿದೆ ಎಂದು ಹೇಳಿದರು.
ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ. ಪುನೀತ್ ದೇಶಪಾಂಡೆ ಸಮಾರೋಪ ಭಾಷಣದಲ್ಲಿ ಮಾತನಾಡಿ, ಸನ್ಮಾರ್ಗ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳಲ್ಲಿ ಶಿಸ್ತು, ಸನ್ನಡತೆ ಹಾಗೂ ಬೌದ್ಧಿಕ ಸಾಮರ್ಥ್ಯ ಬೆಳೆಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದೆ. ವಿದ್ಯಾರ್ಥಿಗಳ ಯಶಸ್ಸಿಗೆ ಪಾಲಕರು ಮತ್ತು ಶಿಕ್ಷಕರ ಸಹಸ್ಪಂದನೆ ಅಗತ್ಯವಾಗಿದೆ ಎಂದು ಹೇಳಿದರು. ಸಿಇಟಿ ಹಾಗೂ ನೀಟ್ ಪರೀಕ್ಷೆಗಳಿಗಾಗಿ ಮಹಾವಿದ್ಯಾಲಯ ಕೈಗೊಂಡಿರುವ ವಿಶೇಷ ಸಿದ್ಧತೆಗಳು, ತರಬೇತಿ ಕ್ರಮಗಳು ಹಾಗೂ ಇತ್ತೀಚೆಗೆ ಅಳವಡಿಸಿಕೊಂಡಿರುವ ಹೊಸ ಸಾಫ್ಟ್ವೇರ್ನ ಉಪಯೋಗಗಳ ಕುರಿತು ಪಾಲಕರಿಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಪ್ರಸಕ್ತ ಸಾಲಿನ ಸಿಇಟಿ ಪರೀಕ್ಷೆಯಲ್ಲಿ ಗದಗ ಜಿಲ್ಲೆಯಲ್ಲಿ ಅತ್ಯುತ್ತಮ ರ್ಯಾಂಕ್ ಗಳಿಸಿ ಸಾಧನೆ ಮಾಡಿದ ವಿದ್ಯಾರ್ಥಿಗಳಾದ ರಜತ್ ತೇಂಬದಮನಿ, ಕಿರಣ ಹಿರೇಮಠ, ಶಿವರಾಮಚೈತನ್ಯ ಕುಲಕರ್ಣಿ ಹಾಗೂ ಅನನ್ಯ ಜೋಶಿ ಅವರನ್ನು ಅಭಿನಂದಿಸಿ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತಾಧಿಕಾರಿ ಎಂ.ಸಿ. ಹಿರೇಮಠ, ನಿರ್ದೇಶಕರಾದ ಪ್ರೊ. ಸೈಯದ್ ಮತೀನ್ ಮುಲ್ಲಾ, ಪ್ರೊ. ರಾಹುಲ್ ಒಡೆಯರ್, ಮಹಾವಿದ್ಯಾಲಯದ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಮತ್ತು ಪಾಲಕರು ಉಪಸ್ಥಿತರಿದ್ದರು.
ಪ್ರೊ. ಮುರಳೀಧರ ಸಂಕನೂರ ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿದರು. ಪ್ರೊ. ಪರಶುರಾಮ ಕೊಟ್ನಿಕಲ್ ವಂದಿಸಿದರು. ಸಭೆಯಲ್ಲಿ ಪಾಲಕರು ತಮ್ಮ ಸಲಹೆ ಮತ್ತು ಸೂಚನೆಗಳನ್ನು ಮುಕ್ತವಾಗಿ ಹಂಚಿಕೊಂಡರು.
“ವಿದ್ಯಾರ್ಥಿಯ ಯಶಸ್ಸು ಕೇವಲ ಶಿಕ್ಷಕರ ಅಥವಾ ಪಾಲಕರ ಜವಾಬ್ದಾರಿಯಲ್ಲ; ಇಬ್ಬರ ಸಮನ್ವಯ ಮತ್ತು ಸಹಕಾರದಿಂದಲೇ ಉತ್ತಮ ಭವಿಷ್ಯ ನಿರ್ಮಾಣ ಸಾಧ್ಯ”ಪ್ರೊ. ರಾಜೇಶ ಕುಲಕರ್ಣಿಸ್ಟುಡೆಂಟ್ಸ್ ಎಜ್ಯುಕೇಶನ್ ಸಂಸ್ಥೆಯ ಅಧ್ಯಕ್ಷ



