ದಾವಣಗೆರೆ: ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ವಿರುದ್ಧದ ಪೋಕ್ಸೋ ಪ್ರಕರಣ ಇದೀಗ ನಿರ್ಣಾಯಕ ಹಂತಕ್ಕೆ ತಲುಪಿದ್ದು, ಜಾಮೀನು ರದ್ದುಪಡಿಸುವ ಕುರಿತು ನ್ಯಾಯಾಲಯ ಇಂದು ಮಹತ್ವದ ಆದೇಶ ಪ್ರಕಟಿಸುವ ಸಾಧ್ಯತೆ ಇದೆ.
ಹರಿಹರ ಗ್ರಾಮಾಂತರ ಠಾಣೆ ಪೊಲೀಸರು ಈಗಾಗಲೇ 410 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದ್ದು, 63 ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಲಾಗಿದೆ.
ಸ್ವಾಮೀಜಿಗೆ ನೀಡಲಾಗಿರುವ ನಿರೀಕ್ಷಣಾ ಜಾಮೀನು ರದ್ದುಪಡಿಸುವಂತೆ ಸರ್ಕಾರಿ ಅಭಿಯೋಜಕರು ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದು, ಅವರು ಸಮಾಜದಲ್ಲಿ ಪ್ರಭಾವಿ ವ್ಯಕ್ತಿಯಾಗಿರುವುದರಿಂದ ಹೊರಗಿದ್ದರೆ ಸಾಕ್ಷ್ಯಗಳಿಗೆ ಬೆದರಿಕೆ ಹಾಗೂ ಪ್ರಕರಣ ದಿಕ್ಕು ತಪ್ಪಿಸುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ. ಸಂತ್ರಸ್ತರ ಪರವಾಗಿ ಬೆದರಿಕೆ ಕರೆಗಳ ಆಡಿಯೋ ಸೇರಿದಂತೆ ಪೆನ್‌ಡ್ರೈವ್ ದಾಖಲೆಗಳನ್ನು ಸಹ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.
ಇತ್ತ ಸ್ವಾಮೀಜಿ ಪರ ವಕೀಲರು ಇದು ಮಠದ ಆಂತರಿಕ ಜಟಾಪಟಿಯಿಂದ ಹುಟ್ಟಿದ ಷಡ್ಯಂತ್ರ ಎಂದು ವಾದ ಮಂಡಿಸಿದ್ದಾರೆ. ವಾದ–ಪ್ರತಿವಾದಗಳನ್ನು ಆಲಿಸಿರುವ ನ್ಯಾಯಾಧೀಶರು ಆದೇಶವನ್ನು ಕಾಯ್ದಿರಿಸಿದ್ದು, ಇಂದು ಮಧ್ಯಾಹ್ನ ಹೊರಬರುವ ತೀರ್ಪು ಪ್ರಕರಣದ ಭವಿಷ್ಯವನ್ನು ನಿರ್ಧರಿಸಲಿದೆ.



