ಮಂಗಳೂರು: ಐಟಿಐ ವಿದ್ಯಾರ್ಥಿಗಳು ಹಾಗೂ ಉದ್ಯೋಗ ಅರಸುತ್ತಿರುವ ಯುವಕರಿಗೆ ಮಹತ್ವದ ಅವಕಾಶ ಒದಗಿಸುವ ನಿಟ್ಟಿನಲ್ಲಿ ಜೂನ್ 22ರಂದು ಮಂಗಳೂರಿನಲ್ಲಿ ಬೃಹತ್ ಉದ್ಯೋಗ ಮತ್ತು ಅಪ್ರೆಂಟಿಸ್‌ಶಿಪ್ ಮೇಳ ನಡೆಯಲಿದೆ.
ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯದ ಮಾರ್ಗದರ್ಶನದಲ್ಲಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಪುರುಷ), ಮಂಗಳೂರು ಈ ಮೇಳವನ್ನು ಆಯೋಜಿಸಿದ್ದು, ಕಾರ್ಯಕ್ರಮವು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಮಹಿಳಾ) ಆವರಣದಲ್ಲಿ ಬೆಳಗ್ಗೆ 10 ಗಂಟೆಯಿಂದ ಆರಂಭವಾಗಲಿದೆ.
ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕೈಗಾರಿಕಾ ಮತ್ತು ಉತ್ಪಾದನಾ ವಲಯದ ಪ್ರಮುಖ ಸಂಸ್ಥೆಗಳು ಮೇಳದಲ್ಲಿ ಭಾಗವಹಿಸಿ ಖಾಲಿ ಹುದ್ದೆಗಳ ನೇಮಕಾತಿ ಹಾಗೂ ಅಪ್ರೆಂಟಿಸ್ ತರಬೇತಿಗಾಗಿ ಅಭ್ಯರ್ಥಿಗಳ ಆಯ್ಕೆ ನಡೆಸಲಿವೆ.
ಐಟಿಐ ಉತ್ತೀರ್ಣ ಅಭ್ಯರ್ಥಿಗಳು, ಅಂತಿಮ ವರ್ಷದ ತರಬೇತಿ ಪಡೆಯುತ್ತಿರುವ ವಿದ್ಯಾರ್ಥಿಗಳು ಹಾಗೂ ಉದ್ಯೋಗಕ್ಕಾಗಿ ಕಾಯುತ್ತಿರುವ ಯುವಕರು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ. ಅರ್ಜಿದಾರರು ತಮ್ಮ ಮೂಲ ದಾಖಲಾತಿಗಳು, ಪ್ರಮಾಣಪತ್ರಗಳು, ರೆಸ್ಯೂಮ್ ಹಾಗೂ ಜೆರಾಕ್ಸ್ ಪ್ರತಿಗಳೊಂದಿಗೆ ಮೇಳಕ್ಕೆ ಹಾಜರಾಗಬೇಕು.
ಸ್ಥಳೀಯ ಯುವಜನತೆಗೆ ಉದ್ಯೋಗ ಮತ್ತು ಕೈಗಾರಿಕಾ ತರಬೇತಿ ಅವಕಾಶ ಕಲ್ಪಿಸುವ ಉದ್ದೇಶದಿಂದ ಆಯೋಜಿಸಲಾಗುತ್ತಿರುವ ಈ ಮೇಳದ ಪ್ರಯೋಜನವನ್ನು ಅರ್ಹ ಅಭ್ಯರ್ಥಿಗಳು ಪಡೆದುಕೊಳ್ಳಬೇಕು ಎಂದು ಸಂಸ್ಥೆಯ ಪ್ರಾಚಾರ್ಯರು ತಿಳಿಸಿದ್ದಾರೆ.



