ಬಳ್ಳಾರಿ: ಲೇಔಟ್ ಅಭಿವೃದ್ಧಿ ಯೋಜನೆಗೆ ಅನುಮೋದನೆ ನೀಡುವ ನೆಪದಲ್ಲಿ ₹3.50 ಲಕ್ಷ ಲಂಚ ಪಡೆಯುತ್ತಿದ್ದ ವೇಳೆ ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ (ಬುಡಾ) ಸರ್ವೇಯರ್ ಶಾಂತಮೂರ್ತಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ಈರೇಶ್ ಎಂಬುವರು ನೀಡಿದ ದೂರಿನ ಆಧಾರದ ಮೇಲೆ ಲೋಕಾಯುಕ್ತ ಪೊಲೀಸರು ಬಲೆ ಬೀಸಿ ಕಾರ್ಯಾಚರಣೆ ನಡೆಸಿದರು. ಲೇಔಟ್ ಪ್ಲಾನ್‌ಗೆ ಅನುಮೋದನೆ ನೀಡಲು ಶಾಂತಮೂರ್ತಿ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು.
ಶಾಂತಮೂರ್ತಿ ಪರವಾಗಿ ಮೊಹಮ್ಮದ್ ಸಾಜೀದ್ ಎಂಬಾತ ಈರೇಶ್ ಅವರಿಂದ ₹3.50 ಲಕ್ಷ ಹಣ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಇಬ್ಬರನ್ನೂ ರೆಡ್‌ಹ್ಯಾಂಡ್ ಆಗಿ ಬಂಧಿಸಿದ್ದಾರೆ.
ಕಾರ್ಯಾಚರಣೆಯ ವೇಳೆ ಲಂಚದ ಹಣವನ್ನು ವಶಪಡಿಸಿಕೊಂಡಿರುವ ಅಧಿಕಾರಿಗಳು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಲಂಚದ ಬೇಡಿಕೆ ಮತ್ತು ಹಣ ವರ್ಗಾವಣೆಗೆ ಸಂಬಂಧಿಸಿದ ಇನ್ನಷ್ಟು ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದ್ದು, ಪ್ರಕರಣದ ಕುರಿತು ಲೋಕಾಯುಕ್ತ ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.



