ಕೊಪ್ಪಳ: ಕರ್ನಾಟಕ ಸೇರಿದಂತೆ ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳ ರೈತರ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯಕ್ಕೆ ಹೊಸ ರೂಪ ಸಿಕ್ಕಿದ್ದು, ನೂತನ 33 ಕ್ರಸ್ಟ್ ಗೇಟ್ಗಳ ಲೋಕಾರ್ಪಣೆ ಕಾರ್ಯಕ್ರಮ ಜೂನ್ 25ರಂದು ನಡೆಯಲಿದೆ.
ಈ ಹಿನ್ನೆಲೆಯಲ್ಲಿ ಕೊಪ್ಪಳ ತಾಲೂಕಿನ ಮುನಿರಾಬಾದ್ನ ಸರ್ಕಾರಿ, ಖಾಸಗಿ ಹಾಗೂ ಅನುದಾನಿತ ಶಾಲೆಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.
ತುಂಗಭದ್ರಾ ಜಲಾಶಯದ 33 ನೂತನ ಕ್ರಸ್ಟ್ ಗೇಟ್ಗಳ ಉದ್ಘಾಟನಾ ಸಮಾರಂಭಕ್ಕೆ ಭರದ ಸಿದ್ಧತೆಗಳು ನಡೆದಿವೆ. ಕಾರ್ಯಕ್ರಮ ನಡೆಯಲಿರುವ ಮುನಿರಾಬಾದ್ನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣವನ್ನು ವಿಶೇಷವಾಗಿ ಅಲಂಕರಿಸಲಾಗಿದ್ದು, ಜರ್ಮನ್ ಮಾದರಿಯ ಹವಾಮಾನ ನಿಯಂತ್ರಿತ ಬೃಹತ್ ಟೆಂಟ್ ಹಾಗೂ ವಿಐಪಿಗಳಿಗಾಗಿ ಅತ್ಯಾಧುನಿಕ ವೇದಿಕೆ ನಿರ್ಮಿಸಲಾಗಿದೆ.
ಕಾರ್ಯಕ್ರಮದಲ್ಲಿ ಸಾವಿರಾರು ರೈತರು ಭಾಗವಹಿಸುವ ನಿರೀಕ್ಷೆಯಿದ್ದು, ಸುಮಾರು 5 ಸಾವಿರಕ್ಕೂ ಹೆಚ್ಚು ಆಸನ ವ್ಯವಸ್ಥೆ ಮಾಡಲಾಗಿದೆ. ಕೊಪ್ಪಳ, ರಾಯಚೂರು, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳ ರೈತರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಕರ್ನಾಟಕ, ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸುವ ನಿರೀಕ್ಷೆಯಿದೆ. ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಆಗಮನ ಖಚಿತವಾಗಿದ್ದು, ಅವರು ನಾಳೆ ಬೆಳಿಗ್ಗೆ 9.40ಕ್ಕೆ ಮುನಿರಾಬಾದ್ಗೆ ಆಗಮಿಸಲಿದ್ದಾರೆ. ಬಳಿಕ ತುಂಗಭದ್ರಾ ಜಲಾಶಯಕ್ಕೆ ಭೇಟಿ ನೀಡಿ 33 ನೂತನ ಕ್ರಸ್ಟ್ ಗೇಟ್ಗಳನ್ನು ಲೋಕಾರ್ಪಣೆ ಮಾಡಲಿದ್ದಾರೆ.
2024ರ ಡಿಸೆಂಬರ್ನಲ್ಲಿ ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ಕೊಚ್ಚಿಹೋಗಿದ್ದ ಪರಿಣಾಮ ಅಪಾರ ಪ್ರಮಾಣದ ನೀರು ನದಿಗೆ ಹರಿದುಹೋಗಿತ್ತು. ಈ ಘಟನೆ ಜಲಾನಯನ ಪ್ರದೇಶದ ರೈತರಲ್ಲಿ ಆತಂಕ ಸೃಷ್ಟಿಸಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಶಾಶ್ವತ ಪರಿಹಾರಕ್ಕೆ ಮುಂದಾಗಿ, ಕೇವಲ ಒಂದು ಗೇಟ್ ದುರಸ್ತಿ ಮಾಡುವ ಬದಲು ಜಲಾಶಯದ ಎಲ್ಲಾ 33 ಕ್ರಸ್ಟ್ ಗೇಟ್ಗಳನ್ನು ಬದಲಾಯಿಸುವ ಮಹತ್ವದ ನಿರ್ಧಾರ ಕೈಗೊಂಡಿತ್ತು.
ಅದರಂತೆ ಸುಮಾರು 51 ಕೋಟಿ ರೂಪಾಯಿ ವೆಚ್ಚದಲ್ಲಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ 33 ನೂತನ ಕ್ರಸ್ಟ್ ಗೇಟ್ಗಳನ್ನು ಅಳವಡಿಸಲಾಗಿದ್ದು, ಇದೀಗ ಅವು ಅಧಿಕೃತವಾಗಿ ಲೋಕಾರ್ಪಣೆಯಾಗಲಿವೆ. ಈ ಯೋಜನೆಯಿಂದ ತುಂಗಭದ್ರಾ ಜಲಾಶಯದ ಸುರಕ್ಷತೆ ಮತ್ತಷ್ಟು ಬಲವಾಗಲಿದ್ದು, ರೈತರ ನೀರಾವರಿ ಭರವಸೆಯೂ ಹೆಚ್ಚಲಿದೆ.



