ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಬಿಟ್ಟುಬಿಡದೇ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಬಿರುಗಾಳಿಯಿಂದ ಜನಜೀವನ ಅಸ್ತವ್ಯಸ್ತವಾಗಿದೆ.
ನಗರದ ಖಾಸಬಾಗದ ಉಪ್ಪಾರ ಗಲ್ಲಿಯಲ್ಲಿ ಭಾರಿ ಗಾಳಿಗೆ ಬೃಹತ್ ಹುಣಸೆ ಮರ ಹಾಗೂ ರೆಂಬೆಗಳು ಧರೆಗುರುಳಿದ್ದು, ನಾಲ್ಕು ಮನೆಗಳಿಗೆ ತೀವ್ರ ಹಾನಿಯಾಗಿದೆ. ಅನಿಲ್ ಮುಟ್ಟೇಕರ್, ಆನಂದ ಭದ್ವಾಂಕರ್, ಏಕನಾಥ ಭದ್ವಾಂಕರ್ ಹಾಗೂ ಪ್ರಶಾಂತ ಗೋರ್ಲೆ ಅವರ ಮನೆಗಳು ಜಖಂಗೊಂಡಿವೆ.
ಮರ ಬೀಳುವ ವೇಳೆ ಮನೆಯಲ್ಲಿದ್ದ ಕೆಲ ಅಗತ್ಯ ವಸ್ತುಗಳು ನಾಶವಾಗಿದ್ದು, ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ. ಸಂತ್ರಸ್ತ ಕುಟುಂಬಗಳು ಸರ್ಕಾರ ಹಾಗೂ ಅಧಿಕಾರಿಗಳು ತಕ್ಷಣ ಪರಿಹಾರ ನೀಡಬೇಕೆಂದು ಮನವಿ ಮಾಡಿದ್ದಾರೆ.
ಅದೃಷ್ಟವಶಾತ್, ಮರ ಬೀಳುವ ಮುನ್ನವೇ ಎಚ್ಚರಿಕೆ ಸಿಕ್ಕಿದ್ದರಿಂದ ನಾಲ್ಕೂ ಕುಟುಂಬಗಳ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ಇದರಿಂದ ಯಾವುದೇ ಜೀವಹಾನಿ ಸಂಭವಿಸಿಲ್ಲ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಶಹಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ. ಸದ್ಯ ಬಿದ್ದಿರುವ ಬೃಹತ್ ಮರವನ್ನು ಕತ್ತರಿಸಿ ತೆರವುಗೊಳಿಸುವ ಕಾರ್ಯಾಚರಣೆ ನಡೆಯುತ್ತಿದೆ.



