ಭಾರತ ಹಾಗೂ ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿ ಮುಕ್ತಾಯವಾದ ಬೆನ್ನಲ್ಲೇ ಉಭಯ ತಂಡಗಳು ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಮುಖಾಮುಖಿಯಾಗಲಿವೆ. ಆದರೆ ಸರಣಿ ಆರಂಭಕ್ಕೂ ಮುನ್ನವೇ ಟೀಮ್ ಇಂಡಿಯಾಗೆ ಆಘಾತ ಎದುರಾಗಿದ್ದು, ಯುವ ಆಲ್ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಗಾಯದ ಕಾರಣದಿಂದ ತಂಡದಿಂದ ಹೊರಬಿದ್ದಿದ್ದಾರೆ.
ಫಿಟ್ನೆಸ್ ಸಮಸ್ಯೆಯಿಂದ ಸಂಪೂರ್ಣವಾಗಿ ಚೇತರಿಸಿಕೊಳ್ಳಲು ಇನ್ನಷ್ಟು ಸಮಯ ಬೇಕಾಗಿರುವ ಹಿನ್ನೆಲೆಯಲ್ಲಿ ನಿತೀಶ್ ಅವರನ್ನು ಆಯ್ಕೆ ಸಮಿತಿ ಏಕದಿನ ಸರಣಿಯಿಂದ ಕೈಬಿಟ್ಟಿದೆ.
ಅಫ್ಘಾನಿಸ್ತಾನ ವಿರುದ್ಧದ ಅಂತಿಮ ಏಕದಿನ ಪಂದ್ಯದಲ್ಲಿ ನಿತೀಶ್ ಕುಮಾರ್ ರೆಡ್ಡಿ ಎಡಗಾಲಿನ ಸ್ನಾಯು ಸೆಳೆತಕ್ಕೆ ಒಳಗಾಗಿದ್ದರು. ಗಾಯದಿಂದಾಗಿ ಅವರು ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಆಡಲು ಸಾಧ್ಯವಾಗುತ್ತಿಲ್ಲ. ಸದ್ಯ ಅವರು ಬೆಂಗಳೂರಿನ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್ (CoE) ನಲ್ಲಿ ಚಿಕಿತ್ಸೆ ಹಾಗೂ ಪುನಶ್ಚೇತನ ಪಡೆಯುತ್ತಿದ್ದಾರೆ.
ನಿತೀಶ್ ಹೊರಬಿದ್ದ ಹಿನ್ನೆಲೆಯಲ್ಲಿ, ಈಗಾಗಲೇ ಇಂಗ್ಲೆಂಡ್ ಪ್ರವಾಸದಲ್ಲಿ ಟಿ20 ಸರಣಿ ಆಡುತ್ತಿರುವ ಅನುಭವಿ ಆಲ್ರೌಂಡರ್ ಶಿವಂ ದುಬೆ ಅವರನ್ನು ಏಕದಿನ ತಂಡದಲ್ಲೂ ಮುಂದುವರಿಸಲು ಆಯ್ಕೆ ಸಮಿತಿ ತೀರ್ಮಾನಿಸಿದೆ. 2024ರ ಬಳಿಕ ಮೊದಲ ಬಾರಿಗೆ ಭಾರತ ಏಕದಿನ ತಂಡದಲ್ಲಿ ಸ್ಥಾನ ಪಡೆದಿರುವ ಶಿವಂ ದುಬೆಗೆ ಸುಮಾರು ಎರಡು ವರ್ಷಗಳ ಬಳಿಕ ಮತ್ತೆ ರಾಷ್ಟ್ರೀಯ ತಂಡದಲ್ಲಿ ಅವಕಾಶ ದೊರೆತಿದೆ.
ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಜುಲೈ 14ರಿಂದ ಆರಂಭವಾಗಲಿದೆ. ಮೊದಲ ಪಂದ್ಯ ಬರ್ಮಿಂಗ್ಹ್ಯಾಮ್ನ ಎಡ್ಜ್ಬಾಸ್ಟನ್ ಮೈದಾನದಲ್ಲಿ ನಡೆಯಲಿದ್ದು, ಎರಡನೇ ಪಂದ್ಯ ಜುಲೈ 16ರಂದು ಕಾರ್ಡಿಫ್ನ ಸೋಫಿಯಾ ಗಾರ್ಡನ್ಸ್ನಲ್ಲಿ ನಡೆಯಲಿದೆ. ಅಂತಿಮ ಹಾಗೂ ಮೂರನೇ ಏಕದಿನ ಪಂದ್ಯ ಜುಲೈ 19ರಂದು ಲಂಡನ್ನ ಐತಿಹಾಸಿಕ ಲಾರ್ಡ್ಸ್ ಮೈದಾನದಲ್ಲಿ ಜರುಗಲಿದೆ.
ಭಾರತದ ಏಕದಿನ ತಂಡ:
ಶುಭ್ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪನಾಯಕ), ಕೆ.ಎಲ್. ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಶಿವಂ ದುಬೆ, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್ ಹಾಗೂ ಗುರ್ನೂರ್ ಬ್ರಾರ್.



