ಬೆಂಗಳೂರು: ಹಿಟ್ ಆ್ಯಂಡ್ ರನ್ ಪ್ರಕರಣದಲ್ಲಿ 28 ವರ್ಷದ ಯುವಕ ಮೃತಪಟ್ಟಿರುವ ದುರ್ಘಟನೆ ಬೆಂಗಳೂರು ಉತ್ತರದ ಚಿಕ್ಕಬಾಣಾವರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ಕೆಂಪಯ್ಯನಗರದ ಬಳಿ ನಡೆದಿದೆ.
ಮೃತರನ್ನು ವಿನೋದ್ (28) ಎಂದು ಗುರುತಿಸಲಾಗಿದೆ. ಅವರು ತಮ್ಮ ಅಣ್ಣನೊಂದಿಗೆ ಮಾದನಾಯಕನಹಳ್ಳಿಯಲ್ಲಿ ಬೇಕರಿ ನಡೆಸುತ್ತಿದ್ದರು. ಪ್ರತಿದಿನದಂತೆ ಅಂಗಡಿ ಮುಚ್ಚಿ ಹೆಸರಘಟ್ಟದಲ್ಲಿರುವ ತಮ್ಮ ಮನೆಗೆ ಆಕ್ಟಿವಾ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.
ಕೆಂಪಯ್ಯನಗರದ ಬಳಿ ಎದುರಿನಿಂದ ಬಂದ ಟಿಟಿ ವಾಹನ ವಿನೋದ್ ಅವರ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ವಿನೋದ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಪಘಾತದ ಬಳಿಕ ಟಿಟಿ ವಾಹನ ಚಾಲಕ ವಾಹನವನ್ನು ನಿಲ್ಲಿಸದೇ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಹಿನ್ನೆಲೆಯಲ್ಲಿ ಇದು ಹಿಟ್ ಆ್ಯಂಡ್ ರನ್ ಪ್ರಕರಣವಾಗಿ ದಾಖಲಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಚಿಕ್ಕಬಾಣಾವರ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.
ಡಿಕ್ಕಿ ಹೊಡೆದು ಪರಾರಿಯಾಗಿರುವ ಟಿಟಿ ವಾಹನ ಹಾಗೂ ಅದರ ಚಾಲಕನ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ. ಸಿಸಿಟಿವಿ ದೃಶ್ಯಗಳು ಸೇರಿದಂತೆ ಲಭ್ಯವಿರುವ ಸಾಕ್ಷ್ಯಗಳ ಆಧಾರದಲ್ಲಿ ತನಿಖೆ ಮುಂದುವರಿದಿದೆ.



