ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
ಕರಾವಳಿ ಭಾಗಗಳಲ್ಲಿ ಬಲವಾದ ಗಾಳಿಯೂ ಬೀಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಇಲಾಖೆ ಸೂಚಿಸಿದೆ.
ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಜೊತೆಗೆ ಮಲೆನಾಡಿನ ಶಿವಮೊಗ್ಗ, ಹಾಸನ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಇದೇ ವೇಳೆ ಬೆಂಗಳೂರು, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಚಾಮರಾಜನಗರ, ಚಿಕ್ಕಬಳ್ಳಾಪುರ ಹಾಗೂ ಚಿತ್ರದುರ್ಗ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ಜುಲೈ 11ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ಕ್ರಮೇಣ ಇಳಿಮುಖವಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ. ವಿಶೇಷವಾಗಿ ಬೆಳಗಾವಿ ಜಿಲ್ಲೆಯಲ್ಲಿ ಮಳೆಯ ತೀವ್ರತೆ ಕಡಿಮೆಯಾಗುವ ನಿರೀಕ್ಷೆಯಿದೆ.
ಭಾರೀ ಮಳೆಯಾಗುವ ಪ್ರದೇಶಗಳಲ್ಲಿ ತಗ್ಗು ಪ್ರದೇಶದ ನಿವಾಸಿಗಳು, ನದಿ ತೀರದ ಜನರು ಹಾಗೂ ವಾಹನ ಸವಾರರು ಎಚ್ಚರಿಕೆಯಿಂದ ಇರಬೇಕು ಎಂದು ಹವಾಮಾನ ಇಲಾಖೆ ಸಲಹೆ ನೀಡಿದೆ.



