ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: ಮಕ್ಕಳ ಭವಿಷ್ಯ ರೂಪಿಸಿಕೊಳ್ಳಲು ಮೊಬೈಲ್‌ಗಿಂತ ಪುಸ್ತಕವೇ ಉತ್ತಮ ಸಂಗಾತಿ. ವಿದ್ಯಾರ್ಥಿಗಳು ಮೊಬೈಲ್‌ನಿಂದ ದೂರವಿದ್ದು ಓದಿನತ್ತ ಹೆಚ್ಚಿನ ಗಮನ ಹರಿಸಬೇಕು ಎಂದು ಬುಡ್ಡಿ ಬಸವರಾಜ್ ಹೇಳಿದರು.
ತಾಲೂಕಿನ ಕೆಚ್ಚಿನಬಂಡಿ ಗ್ರಾಮದಲ್ಲಿ ಜನಸೇವಾ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಹೆಚ್ಚಿನ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಉಚಿತ ನೋಟ್‌ಬುಕ್ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಪೋಷಕರು ಕೂಲಿ ಮಾಡಿ ಮಕ್ಕಳ ಭವಿಷ್ಯ ರೂಪಿಸಲು ಶ್ರಮಿಸುತ್ತಿದ್ದಾರೆ. ಅವರ ಕಷ್ಟವನ್ನು ಅರಿತು ವಿದ್ಯಾರ್ಥಿಗಳು ಸಂಸ್ಕಾರ, ಶಿಸ್ತು ಬೆಳೆಸಿಕೊಂಡು ಶಿಕ್ಷಕರು ಹೇಳುವ ಪಾಠದತ್ತ ಗಮನ ಹರಿಸಬೇಕು. ಸರ್ಕಾರಿ ಶಾಲೆಗಳ ಉಳಿವು-ಬೆಳವಣಿಗೆ ಗ್ರಾಮೀಣ ವಿದ್ಯಾರ್ಥಿಗಳ ಕೈಯಲ್ಲಿದೆ ಎಂದು ಹೇಳಿದರು.
ಪತ್ರಕರ್ತ ಸಿ. ಶಿವಾನಂದ್ ಮಾತನಾಡಿ, ಯಾವುದೇ ಸ್ವಾರ್ಥವಿಲ್ಲದೆ ಜನಸೇವಾ ಟ್ರಸ್ಟ್ ಕೈಗೊಂಡಿರುವ ಶಿಕ್ಷಣ ಸೇವೆ ಮಾದರಿಯಾಗಿದ್ದು, ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಸಮಾಜಕ್ಕೆ ಕೊಡುಗೆ ನೀಡುವ ವ್ಯಕ್ತಿಗಳಾಗಬೇಕು ಎಂದು ಕರೆ ನೀಡಿದರು.
ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಉಮಾಪತಿ ಶೆಟ್ಟರ್ ಮಾತನಾಡಿ, ಉಚಿತ ನೋಟ್‌ಬುಕ್ ವಿತರಣೆಯಂತಹ ಕಾರ್ಯಕ್ರಮಗಳು ಗ್ರಾಮೀಣ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಹೊಸ ಉತ್ತೇಜನ ನೀಡುತ್ತವೆ ಎಂದರು.
ಕಾರ್ಯಕ್ರಮದಲ್ಲಿ ಆರು ಮಂದಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಅಲ್ಲದೆ 98 ವಿದ್ಯಾರ್ಥಿಗಳಿಗೆ ಉಚಿತ ನೋಟ್‌ಬುಕ್‌ಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ವಿಶ್ವನಾಥ ಭಾವಿಕಟ್ಟಿ, ಕಾರ್ಯದರ್ಶಿ ರಾಜಾಹುಲಿ, ಕೋಡಿಹಳ್ಳಿ ಮಂಜುನಾಥ, ಟಿ. ರಮೇಶ್, ಎಸ್‌ಡಿಎಂಸಿ ಅಧ್ಯಕ್ಷ ವಿ. ಅಶೋಕ್, ಶಿವಕುಮಾರ್, ದುರುಗಪ್ಪ, ಕೆಇಬಿ ಮಲ್ಲೇಶ್, ವಿರೂಪಾಕ್ಷಿ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು. ಉಪನ್ಯಾಸಕ ಬಸವರಾಜ್ ಕಾರ್ಯಕ್ರಮ ನಿರೂಪಿಸಿದರು. ಮಲ್ಲೇಶ್ ವಂದಿಸಿದರು.



