ಬೆಂಗಳೂರು: ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಾಯಕಾರಿ ರಾಸಾಯನಿಕ ತುಂಬಿದ ಲಾರಿ ಪಲ್ಟಿಯಾಗಿ ಅನಿಲ ಸೋರಿಕೆಯಾದ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಕುಲುವನಹಳ್ಳಿ ಗ್ರಾಮದ ಬಳಿ ನಡೆದಿದೆ.
ತುಮಕೂರು ಕಡೆಯಿಂದ ಬೆಂಗಳೂರಿನತ್ತ ಬರುತ್ತಿದ್ದ ಕ್ಲೋರೈಡ್ ಕೆಮಿಕಲ್ ತುಂಬಿದ ಲಾರಿ, ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲೇ ಪಲ್ಟಿಯಾಗಿದೆ. ಲಾರಿ ಪಲ್ಟಿಯಾದ ಪರಿಣಾಮ ರಾಸಾಯನಿಕ ಸೋರಿಕೆಯಾಗಿದ್ದು, ಸ್ಥಳೀಯರು ಹಾಗೂ ವಾಹನ ಸವಾರರಲ್ಲಿ ಆತಂಕ ಮೂಡಿದೆ.
ಘಟನೆ ಮಾಹಿತಿ ತಿಳಿದ ತಕ್ಷಣ ನೆಲಮಂಗಲ ಅಗ್ನಿಶಾಮಕ ಸಿಬ್ಬಂದಿ ಹಾಗೂ ನೆಲಮಂಗಲ ಸಂಚಾರಿ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಸೋರಿಕೆಯನ್ನು ನಿಯಂತ್ರಿಸುವುದು ಹಾಗೂ ಲಾರಿಯನ್ನು ತೆರವುಗೊಳಿಸುವ ಕಾರ್ಯಾಚರಣೆ ಕೈಗೊಳ್ಳಲಾಗಿದೆ.
ಅಪಾಯಕಾರಿ ರಾಸಾಯನಿಕ ಸೋರಿಕೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಸ್ಥಳದಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಇನ್ನು ಲಾರಿ ಪಲ್ಟಿಯಾದ ಪರಿಣಾಮ ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿದೆ. ಭಯದ ವಾತಾವರಣದ ನಡುವೆ ವಾಹನ ಸವಾರರು ನಿಧಾನಗತಿಯಲ್ಲಿ ಸಂಚರಿಸುವಂತಾಗಿದೆ.
ಪೊಲೀಸರು ಸಂಚಾರ ನಿಯಂತ್ರಣಕ್ಕೆ ಕ್ರಮ ಕೈಗೊಂಡಿದ್ದು, ಲಾರಿ ತೆರವು ಕಾರ್ಯ ಪೂರ್ಣಗೊಂಡ ಬಳಿಕ ಸಂಚಾರ ಸಾಮಾನ್ಯವಾಗುವ ನಿರೀಕ್ಷೆಯಿದೆ.



