ನವದೆಹಲಿ: ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಪ್ರತಿಭಟನೆಗಳು ಮುಂದುವರಿದಿರುವ ನಡುವೆಯೇ, ಪರೀಕ್ಷಾ ಅಕ್ರಮಗಳಿಗೆ ಶಾಶ್ವತ ಕಡಿವಾಣ ಹಾಕುವ ಉದ್ದೇಶದಿಂದ ಕೇಂದ್ರ ಸರ್ಕಾರ ಕಠಿಣ ಕಾನೂನು ತರಲು ಸಜ್ಜಾಗಿದೆ.
ಪರೀಕ್ಷಾ ವ್ಯವಸ್ಥೆಯ ವಿಶ್ವಾಸಾರ್ಹತೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ವಿಶೇಷ ನ್ಯಾಯಾಂಗ ವ್ಯವಸ್ಥೆ ರೂಪಿಸುವ ಪ್ರಸ್ತಾವನೆ ಸಿದ್ಧವಾಗುತ್ತಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಪ್ರಸ್ತಾವಿತ ಕಾನೂನಿನ ಪ್ರಕಾರ, ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ವಿಶೇಷ ಫಾಸ್ಟ್‌ಟ್ರ್ಯಾಕ್ ನ್ಯಾಯಾಲಯಗಳನ್ನು ಸ್ಥಾಪಿಸಲಾಗುತ್ತದೆ. ಪ್ರಕರಣ ದಾಖಲಾಗಿದ ದಿನದಿಂದ ಮೂರು ತಿಂಗಳೊಳಗೆ ವಿಚಾರಣೆ ಪೂರ್ಣಗೊಳಿಸಿ ತೀರ್ಪು ನೀಡುವ ವ್ಯವಸ್ಥೆಯನ್ನು ಕಾನೂನಿನಲ್ಲಿ ಸೇರಿಸುವ ಸಾಧ್ಯತೆ ಇದೆ.
ಇದರ ಜೊತೆಗೆ, ಪ್ರಶ್ನೆಪತ್ರಿಕೆ ಸೋರಿಕೆ ಜಾಲದಲ್ಲಿ ಭಾಗಿಯಾಗಿರುವವರಿಗೆ ಅತ್ಯಂತ ಕಠಿಣ ಶಿಕ್ಷೆ ವಿಧಿಸುವ ಪ್ರಸ್ತಾಪವೂ ಸರ್ಕಾರದ ಮುಂದಿದೆ. ತಪ್ಪಿತಸ್ಥರೆಂದು ಸಾಬೀತಾದವರಿಗೆ ಗರಿಷ್ಠ 10 ವರ್ಷಗಳವರೆಗೆ ಜೈಲು ಶಿಕ್ಷೆ ಹಾಗೂ 10 ಕೋಟಿ ರೂಪಾಯಿವರೆಗೆ ದಂಡ ವಿಧಿಸುವ ಅವಕಾಶ ಕಲ್ಪಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಸಂಘಟಿತ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶದಲ್ಲಿ ಜಾರಿಗೆ ಬರುವ ಅತ್ಯಂತ ಕಠಿಣ ಕಾನೂನುಗಳಲ್ಲಿ ಇದೂ ಒಂದಾಗುವ ಸಾಧ್ಯತೆ ಇದೆ.
ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದು, ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ, ಹೊಣೆಗಾರಿಕೆ ಮತ್ತು ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೆ ತರಬೇಕೆಂದು ಆಗ್ರಹಿಸುತ್ತಿದ್ದಾರೆ.
ಈ ಬೆಳವಣಿಗೆಗಳ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಕೇಂದ್ರ ಸಚಿವ ಸಂಪುಟ ಸಭೆ ನಡೆದಿದ್ದು, ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟಲು ಕಠಿಣಾತಿಕಠಿಣ ಕಾನೂನು ಜಾರಿಗೆ ತರುವ ಕುರಿತು ಸರ್ಕಾರ ಮಹತ್ವದ ನಿರ್ಧಾರಗಳತ್ತ ಸಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.



