ಪಾಟ್ನಾ: ಬಿಹಾರದಲ್ಲಿ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ AK-47 ರೈಫಲ್ ಹಿಡಿದು ಗುಂಡು ಹಾರಿಸಿದ ಆರೋಪದ ಮೇಲೆ ಪೊಲೀಸ್ ಕಾನ್ಸ್ಟೇಬಲ್ ಒಬ್ಬರನ್ನು ಅಮಾನತು ಮಾಡಲಾಗಿದೆ. ಸಿವಾನ್ ಜಿಲ್ಲೆಯಲ್ಲಿ ನಡೆದ ‘ಬಿಹಾರ ಬಂದ್’ ಪ್ರತಿಭಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಘಟನೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ಜುಲೈ 25ರಂದು ಸಿವಾನ್ ಜಿಲ್ಲೆಯಲ್ಲಿ ನಡೆದ ಪ್ರತಿಭಟನೆ ವೇಳೆ ಕಾನ್ಸ್ಟೇಬಲ್ವೊಬ್ಬರು ಪ್ರತಿಭಟನಾಕಾರರ ಕಡೆ AK-47 ಹಿಡಿದು ಗುಂಡು ಹಾರಿಸಿರುವ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿದ್ದವು. ವಿಡಿಯೋ ವೈರಲ್ ಆದ ಬೆನ್ನಲ್ಲೇ ಪೊಲೀಸ್ ಇಲಾಖೆ ಕ್ರಮ ಕೈಗೊಂಡಿದೆ.
ಪ್ರತಿಭಟನೆ ವೇಳೆ ಮೂವರು ಗಾಯಗೊಂಡಿದ್ದು, ಅವರನ್ನು ಪಾಟ್ನಾದ ಜಯಪ್ರಭಾ ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ಆರೋಗ್ಯ ಸ್ಥಿತಿ ಸದ್ಯ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.
ಗಾಯಗೊಂಡವರಲ್ಲಿ 15 ವರ್ಷದ ಎಂಡಿ ಆರಿಫ್ ಎಂಬ ಬಾಲಕ ಕೂಡ ಸೇರಿದ್ದಾನೆ. ಸ್ಥಳೀಯ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಆತ, ಪ್ರತಿಭಟನೆ ಹಿನ್ನೆಲೆಯಲ್ಲಿ ಅಂಗಡಿ ಮುಚ್ಚಿ ಮನೆಗೆ ತೆರಳುತ್ತಿದ್ದ ವೇಳೆ ಕುತ್ತಿಗೆಗೆ ಗುಂಡು ತಗುಲಿದೆ. ವೈದ್ಯರು ಶಸ್ತ್ರಚಿಕಿತ್ಸೆ ಮೂಲಕ ಗುಂಡನ್ನು ಹೊರತೆಗೆದಿದ್ದು, ಬಾಲಕನ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಬಿಹಾರ ವಿಧಾನಸಭೆ ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ ಅವರು ಕಾನ್ಸ್ಟೇಬಲ್ ಗುಂಡು ಹಾರಿಸುತ್ತಿರುವ ವಿಡಿಯೋವನ್ನು ಹಂಚಿಕೊಂಡು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕೂಡ ಈ ಘಟನೆ ಕುರಿತು ಪ್ರಸ್ತಾಪಿಸಿ, ಪೊಲೀಸರ ಕ್ರಮವನ್ನು ಖಂಡಿಸಿದ್ದಾರೆ.
ಇದೇ ವೇಳೆ ಪ್ರತಿಭಟನೆ ವೇಳೆ ಕೆಲವು ಪೊಲೀಸರು ರಿವಾಲ್ವಾರ್ಗಳನ್ನು ಕೈಯಲ್ಲಿ ಹಿಡಿದು ಸಾಗುತ್ತಿರುವ ದೃಶ್ಯಗಳು ಕೂಡ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಘಟನೆ ಕುರಿತು ಮತ್ತಷ್ಟು ಚರ್ಚೆಗೆ ಕಾರಣವಾಗಿದೆ.



