ಮೈಸೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತ ಅಂತಿಮ ನಿರ್ಧಾರ ಇಂದು ರಾತ್ರಿ ನಡೆಯಲಿರುವ ಸಭೆಯಲ್ಲಿ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ಇಂದು ರಾತ್ರಿ ಸಭೆ ನಡೆಯಲಿದೆ. ಆ ಸಭೆಯಲ್ಲಿ ಎಲ್ಲಾ ವಿಚಾರಗಳ ಕುರಿತು ಅಂತಿಮ ತೀರ್ಮಾನವಾಗಲಿದೆ. ಇಂದೇ ರಾತ್ರಿ ಎಲ್ಲವೂ ಫೈನಲ್ ಆಗುವ ಸಾಧ್ಯತೆ ಇದೆ” ಎಂದು ಹೇಳಿದರು.
ಸಚಿವ ಸಂಪುಟ ವಿಸ್ತರಣೆ ಯಾವ ದಿನ ನಡೆಯಲಿದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, “ಅದರ ಬಗ್ಗೆ ಮುಖ್ಯಮಂತ್ರಿ ಅವರನ್ನು ಕೇಳಿ. ವಿಸ್ತರಣೆಯ ದಿನಾಂಕದ ಕುರಿತು ಅವರು ಮಾಹಿತಿ ನೀಡುತ್ತಾರೆ” ಎಂದು ಉತ್ತರಿಸಿದರು.
ಇದಕ್ಕೂ ಮುನ್ನ ದೆಹಲಿಯಿಂದ ನೇರವಾಗಿ ಮೈಸೂರಿಗೆ ಆಗಮಿಸಿದ ಸಿದ್ದರಾಮಯ್ಯ, ತಮ್ಮ ಹಿರಿಯ ಪುತ್ರ ದಿವಂಗತ ರಾಕೇಶ್ ಸಿದ್ದರಾಮಯ್ಯ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಕಾರ್ಯಕ್ರಮದ ಬಳಿಕ ಮತ್ತೆ ದೆಹಲಿಗೆ ತೆರಳಿ ಸಚಿವ ಸಂಪುಟ ವಿಸ್ತರಣೆ ಕುರಿತ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.



