ನವದೆಹಲಿ: ನೀಟ್ (NEET) ಪರೀಕ್ಷೆ ಅಕ್ರಮವನ್ನು ಖಂಡಿಸಿ ದೇಶದ ವಿವಿಧ ಭಾಗಗಳಲ್ಲಿ ನಡೆದ ಪ್ರತಿಭಟನೆಗಳು ಯುವಜನತೆ ಮತ್ತು ಕೇಂದ್ರ ಸರ್ಕಾರದ ನಡುವಿನ ಅಂತರವನ್ನು ಪ್ರತಿಬಿಂಬಿಸುತ್ತವೆ ಎಂಬ ವಾದಗಳನ್ನು ಬಿಜೆಪಿ ಹಿರಿಯ ನಾಯಕಿ ಹಾಗೂ ಮಾಜಿ ಕೇಂದ್ರ ಶಿಕ್ಷಣ ಸಚಿವೆ ಸ್ಮೃತಿ ಇರಾನಿ ತಳ್ಳಿಹಾಕಿದ್ದಾರೆ.
ವಿಶೇಷ ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳನ್ನು ತಡೆಗಟ್ಟಲು ಕೇಂದ್ರ ಸರ್ಕಾರ ತ್ವರಿತ ಹಾಗೂ ಕಾನೂನಾತ್ಮಕ ಕ್ರಮಗಳನ್ನು ಕೈಗೊಂಡಿದ್ದು, ಪರೀಕ್ಷಾ ವ್ಯವಸ್ಥೆಯನ್ನು ಮತ್ತಷ್ಟು ಪಾರದರ್ಶಕಗೊಳಿಸಲು ಸುಧಾರಣಾ ಕ್ರಮಗಳನ್ನು ಜಾರಿಗೊಳಿಸಲಾಗಿದೆ ಎಂದು ಹೇಳಿದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರದ ವಿರುದ್ಧ ಭಿನ್ನಾಭಿಪ್ರಾಯ ವ್ಯಕ್ತಪಡಿಸುವುದು, ಪ್ರತಿಭಟನೆ ನಡೆಸುವುದು ಮತ್ತು ಚರ್ಚೆ ನಡೆಸುವುದು ಪ್ರತಿಯೊಬ್ಬರ ಸಾಂವಿಧಾನಿಕ ಹಕ್ಕಾಗಿದೆ. ಆದರೆ, ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಮಾಡುವುದು ಅಥವಾ ಹಿಂಸಾಚಾರ ಮತ್ತು ಅರಾಜಕತೆ ಸೃಷ್ಟಿಸುವುದನ್ನು ಯಾವುದೇ ಕಾರಣಕ್ಕೂ ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಸ್ಮೃತಿ ಇರಾನಿ ಸ್ಪಷ್ಟಪಡಿಸಿದರು.
ದೆಹಲಿ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆ ವೇಳೆ ದೆಹಲಿ ಪೊಲೀಸ್ ಸಿಬ್ಬಂದಿ ಹಾಗೂ ಅರೆಸೈನಿಕ ಪಡೆಗಳ ಕೆಲ ಸಿಬ್ಬಂದಿಗೆ ಗಾಯಗಳಾಗಿರುವ ಘಟನೆಗೆ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಭದ್ರತಾ ಸಿಬ್ಬಂದಿಯ ಮೇಲಿನ ಹಲ್ಲೆ ಖಂಡನೀಯವಾಗಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು ಹೇಳಿದರು.
ಪ್ರತಿಭಟನೆಯ ನೆಪದಲ್ಲಿ ಸಮಾಜಘಾತಕ ಹಾಗೂ ಕ್ರಿಮಿನಲ್ ಹಿನ್ನೆಲೆಯುಳ್ಳ ಕೆಲ ಶಕ್ತಿಗಳು ಒಳನುಸುಳಿರುವ ಸಾಧ್ಯತೆಗಳಿವೆ. ಆದ್ದರಿಂದ ಸಂಪೂರ್ಣ ತನಿಖೆ ಪೂರ್ಣಗೊಳ್ಳುವ ಮೊದಲು ಯಾವುದೇ ತೀರ್ಮಾನಕ್ಕೆ ಬರುವುದು ಸರಿಯಲ್ಲ ಎಂದು ಅವರು ಅಭಿಪ್ರಾಯಪಟ್ಟರು.



