ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಮುಂದುವರಿಯಲಿದ್ದು, ಮುಂದಿನ 7 ದಿನಗಳ ಕಾಲ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ವಿವಿಧ ಭಾಗಗಳಲ್ಲಿ ಗುಡುಗು, ಸಿಡಿಲು ಹಾಗೂ ಬಿರುಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದರೆ, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅತಿ ಭಾರೀ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ.
ಭಾರೀ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಇನ್ನು ಕರಾವಳಿಯ ಇತರ ಜಿಲ್ಲೆಗಳು ಸೇರಿದಂತೆ ಒಟ್ಟು 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.
ಕರಾವಳಿ ಭಾಗದಲ್ಲಿ ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯುವಾಗ ಹೆಚ್ಚಿನ ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ.
ಇನ್ನು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.
ಉತ್ತರ ಕರ್ನಾಟಕದ ಜಿಲ್ಲೆಗಳಾದ ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಧಾರವಾಡ ಹಾಗೂ ಹಾವೇರಿಯಲ್ಲೂ ಗಾಳಿಯೊಂದಿಗೆ ಹಗುರದಿಂದ ಮಧ್ಯಮ ಮಳೆಯಾಗುವ ಮುನ್ಸೂಚನೆ ಇದೆ.
ರಾಜ್ಯದ ಜನರು ಮಳೆ ಸಂದರ್ಭದಲ್ಲಿ ಎಚ್ಚರಿಕೆ ವಹಿಸುವಂತೆ ಹಾಗೂ ನದಿ, ಹಳ್ಳ-ಕೊಳ್ಳಗಳ ಬಳಿ ತೆರಳದಂತೆ ಅಧಿಕಾರಿಗಳು ಸೂಚಿಸಿದ್ದಾರೆ. ಮಲೆನಾಡು ಮತ್ತು ಕರಾವಳಿ ಭಾಗಗಳಲ್ಲಿ ಪರಿಸ್ಥಿತಿಯನ್ನು ಜಿಲ್ಲಾಡಳಿತಗಳು ನಿರಂತರವಾಗಿ ಗಮನಿಸುತ್ತಿವೆ.



