ಬೆಂಗಳೂರು ಗ್ರಾಮಾಂತರ: ಲಾರಿ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನದೇವಿ ಅಗ್ರಹಾರದ ಬಳಿ ನಡೆದಿದೆ.
ನೆಲಮಂಗಲದಿಂದ ದೊಡ್ಡಬಳ್ಳಾಪುರದ ಕಡೆಗೆ ಲಾರಿಯೊಂದು ತೆರಳುತ್ತಿತ್ತು. ಈ ವೇಳೆ ಚೆನ್ನದೇವಿ ಅಗ್ರಹಾರದ ಬಳಿ ರಸ್ತೆ ತಿರುವಿನಲ್ಲಿ ಲಾರಿ ಹಾಗೂ ಕಾರಿನ ನಡುವೆ ಏಕಾಏಕಿ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದೆ.
ಅಪಘಾತದ ಪರಿಣಾಮ ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಗಾಯಗೊಂಡ ಕಾರು ಚಾಲಕನಿಗೆ ಸ್ಥಳೀಯವಾಗಿ ಚಿಕಿತ್ಸೆ ನೀಡಲಾಗಿದೆ ಎಂದು ತಿಳಿದುಬಂದಿದೆ.
ರಸ್ತೆಯ ತಿರುವಿನಲ್ಲಿ ವಾಹನಗಳ ನಿಯಂತ್ರಣ ತಪ್ಪಿದ ಪರಿಣಾಮ ಅಪಘಾತ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ. ಆದರೆ ಅಪಘಾತಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.
ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೀಡಾದ ವಾಹನಗಳನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಡುವ ಕಾರ್ಯವೂ ನಡೆದಿದೆ.
ಘಟನೆಯ ಕುರಿತು ದೊಡ್ಡಬೆಳವಂಗಲ ಪೊಲೀಸರು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದು, ಅಪಘಾತದ ನಿಖರ ಕಾರಣ ತಿಳಿಯಲು ಮುಂದಾಗಿದ್ದಾರೆ.



