ತುಮಕೂರು: ಲಾರಿಗೆ ಹಿಂಬದಿಯಿಂದ ಬೊಲೆರೋ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತುಮಕೂರು ತಾಲೂಕಿನ ಸೋರೆಕುಂಟೆ ಬಳಿ ನಡೆದಿದೆ.
ಮೃತರ ಪೈಕಿ ಓರ್ವರನ್ನು ಷಣ್ಮುಗ (50) ಎಂದು ಗುರುತಿಸಲಾಗಿದ್ದು, ಅವರೊಂದಿಗೆ ಪ್ರಯಾಣಿಸುತ್ತಿದ್ದ ಮತ್ತೊಬ್ಬ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ. ಮೃತರ ಗುರುತು ಪತ್ತೆಹಚ್ಚಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ಮಾಹಿತಿ ಪ್ರಕಾರ, ಬೆಂಗಳೂರಿನಿಂದ ಚಿತ್ರದುರ್ಗದತ್ತ ಟ್ರ್ಯಾಕ್ಟರ್‌ಗಳನ್ನು ಹೇರಿಕೊಂಡು ಲಾರಿಯೊಂದು ತೆರಳುತ್ತಿತ್ತು. ಇದೇ ವೇಳೆ ಅದೇ ಮಾರ್ಗದಲ್ಲಿ ವೇಗವಾಗಿ ಬಂದ ಬೊಲೆರೋ ಗೂಡ್ಸ್ ವಾಹನವು ಸೋರೆಕುಂಟೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಲಾರಿಯ ಹಿಂಭಾಗಕ್ಕೆ ರಭಸವಾಗಿ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ತೀವ್ರತೆಗೆ ಬೊಲೆರೋ ಗೂಡ್ಸ್ ವಾಹನ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ವಾಹನದಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡು ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಕೋರಾ ಪೊಲೀಸ್ ಠಾಣೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ತುಮಕೂರು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
ಈ ಸಂಬಂಧ ಕೋರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ನಿಖರ ಕಾರಣ ಹಾಗೂ ಮತ್ತೊಬ್ಬ ಮೃತನ ಗುರುತು ಪತ್ತೆಹಚ್ಚಲು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.



