ಬೆಂಗಳೂರು: ಕರ್ನಾಟಕ ವಿಧಾನಮಂಡಲದ ಪ್ರಸಕ್ತ ಸಾಲಿನ ಮುಂಗಾರು ಅಧಿವೇಶನ ಇಂದಿನಿಂದ ಆರಂಭವಾಗಲಿದೆ.
ಆಗಸ್ಟ್ 27ರವರೆಗೆ ಒಟ್ಟು 15 ದಿನಗಳ ಕಾಲ, 10 ಕಾರ್ಯದಿನಗಳಲ್ಲಿ ಅಧಿವೇಶನ ನಡೆಯಲಿದೆ. ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ನಡೆಯುತ್ತಿರುವ ಮೊದಲ ವಿಧಾನಮಂಡಲ ಅಧಿವೇಶನ ಇದಾಗಿದೆ.
ಸಂಪುಟ ಸಹೋದ್ಯೋಗಿಗಳ ಖಾತೆ ಹಂಚಿಕೆ ಪ್ರಕ್ರಿಯೆ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಚಿವರ ಸಭೆ ನಡೆಸಿ, ಅಧಿವೇಶನದಲ್ಲಿ ಪ್ರತಿಪಕ್ಷಗಳ ದಾಳಿಯನ್ನು ಎದುರಿಸಲು ಅಗತ್ಯ ತಂತ್ರಗಾರಿಕೆ ರೂಪಿಸಿದ್ದಾರೆ. ಕಲಾಪ ಮುಗಿದ ಬಳಿಕ ಸಚಿವ ಸಂಪುಟ ಸಭೆಯೂ ನಡೆಯಲಿದ್ದು, ವಿವಿಧ ಪ್ರಮುಖ ವಿಚಾರಗಳ ಕುರಿತು ಚರ್ಚೆ ನಡೆಯಲಿದೆ.
ಅಧಿವೇಶನದ ಮೊದಲ ದಿನವಾದ ಇಂದು ಇತ್ತೀಚೆಗೆ ನಿಧನರಾದ ಮಾಜಿ ಸಚಿವ ಡಿ. ಸುಧಾಕರ್, ಚೆನ್ನಮ್ಮ ದೇವೇಗೌಡ ಸೇರಿದಂತೆ ಹಲವು ಗಣ್ಯರಿಗೆ ವಿಧಾನಸಭೆ ಹಾಗೂ ವಿಧಾನ ಪರಿಷತ್‌ನಲ್ಲಿ ಸಂತಾಪ ಸೂಚಿಸಲಾಗುತ್ತದೆ.
ವಿಧಾನಸಭಾಧ್ಯಕ್ಷರಾಗಿದ್ದ ಯು.ಟಿ. ಖಾದರ್ ಅವರು ಸಚಿವರಾಗಿ ಅಧಿಕಾರ ಸ್ವೀಕರಿಸಿರುವ ಹಿನ್ನೆಲೆಯಲ್ಲಿ ಹಿರಿಯ ನಾಯಕ ಟಿ.ಬಿ. ಜಯಚಂದ್ರ ಅವರನ್ನು ಹಂಗಾಮಿ ಸಭಾಧ್ಯಕ್ಷರನ್ನಾಗಿ ನೇಮಿಸಲಾಗಿದೆ. ವಿಧಾನ ಪರಿಷತ್‌ನ ಹಂಗಾಮಿ ಸಭಾಪತಿಯಾಗಿ ಪುಟ್ಟಣ್ಣ ಅವರು ಕಾರ್ಯನಿರ್ವಹಿಸಲಿದ್ದಾರೆ.
ಆಗಸ್ಟ್ 14ರಂದು ಹೊಸ ವಿಧಾನಸಭಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಕಾಂಗ್ರೆಸ್‌ನಿಂದ ಸಭಾಧ್ಯಕ್ಷ ಸ್ಥಾನಕ್ಕೆ ಜಿ.ಎಸ್. ಪಾಟೀಲ್, ವಿಧಾನ ಪರಿಷತ್ ಸಭಾಪತಿ ಹುದ್ದೆಗೆ ಸಲೀಂ ಅಹ್ಮದ್ ಅವರ ಹೆಸರುಗಳು ಮುಂಚೂಣಿಯಲ್ಲಿವೆ. ಉಪಸಭಾಧ್ಯಕ್ಷ ಸ್ಥಾನಕ್ಕೆ ಉಮಾಶ್ರೀ ಅವರ ಹೆಸರು ಕೇಳಿಬರುತ್ತಿದೆ.
ಇನ್ನು ಉಪಸಭಾಧ್ಯಕ್ಷ ಹುದ್ದೆಗೆ ಸೂಚಿತರಾಗಿದ್ದ ಎ.ಎಸ್. ಪೊನ್ನಣ್ಣ ಅವರನ್ನು ಮುಖ್ಯಮಂತ್ರಿ ರಾಜಕೀಯ ಸಲಹೆಗಾರರನ್ನಾಗಿ ನೇಮಿಸಿರುವ ಹಿನ್ನೆಲೆಯಲ್ಲಿ ಆ ಸ್ಥಾನಕ್ಕೆ ಪರ್ಯಾಯ ಅಭ್ಯರ್ಥಿಯ ಹುಡುಕಾಟ ಮುಂದುವರಿದಿದೆ.
ಆರೋಪಗಳನ್ನು ಎದುರಿಸುತ್ತಿದ್ದ ಬಿ. ನಾಗೇಂದ್ರ ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಂಡಿರುವುದನ್ನು ಖಂಡಿಸಿ ಬಿಜೆಪಿ ಸದನದಲ್ಲಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಸಜ್ಜಾಗಿದೆ. ಬಿಡದಿ ಟೌನ್‌ಶಿಪ್ ಯೋಜನೆ ವಿಚಾರವಾಗಿಯೂ ಬಿಜೆಪಿ ಹಾಗೂ ಜೆಡಿಎಸ್ ಜಂಟಿಯಾಗಿ ಸರ್ಕಾರದ ವಿರುದ್ಧ ಹೋರಾಟ ನಡೆಸಲು ತೀರ್ಮಾನಿಸಿವೆ. ಪಾದಯಾತ್ರೆ ಸೇರಿದಂತೆ ಸದನದ ಒಳಗೂ ಈ ವಿಚಾರವನ್ನು ಪ್ರಸ್ತಾಪಿಸುವ ಸಾಧ್ಯತೆಯಿದೆ.
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಮಳೆಹಾನಿ, ಕಾವೇರಿ ನೀರು ಹಂಚಿಕೆ ವಿವಾದ, ಪ್ರಮುಖ ವಿಧೇಯಕಗಳ ಮಂಡನೆ ಸೇರಿದಂತೆ ಹಲವು ಮಹತ್ವದ ವಿಚಾರಗಳು ಈ ಅಧಿವೇಶನದಲ್ಲಿ ಚರ್ಚೆಗೆ ಬರಲಿವೆ.
ಆಗಸ್ಟ್ 15ರಂದು ಸ್ವಾತಂತ್ರ್ಯ ದಿನಾಚರಣೆ ಹಾಗೂ ಆಗಸ್ಟ್ 16ರಂದು ಭಾನುವಾರವಾಗಿರುವುದರಿಂದ ಸರ್ಕಾರಿ ರಜೆ ಇರಲಿದೆ. ಹೀಗಾಗಿ ಆಗಸ್ಟ್ 17ರಿಂದ ವಿಧಾನಮಂಡಲದ ಕಲಾಪ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆಯಿದೆ.
ಶಾಸಕರು ಸಚಿವರಾಗಿ ಬಡ್ತಿ ಪಡೆದಿರುವ ಹಿನ್ನೆಲೆಯಲ್ಲಿ ವಿಧಾನಸಭೆಯಲ್ಲಿ ಆಡಳಿತ ಪಕ್ಷದ ಆಸನ ವ್ಯವಸ್ಥೆಯಲ್ಲೂ ಬದಲಾವಣೆ ಮಾಡಲಾಗಿದೆ. ಸಿದ್ದರಾಮಯ್ಯ, ಹೆಚ್.ಕೆ. ಪಾಟೀಲ್, ದಿನೇಶ್ ಗುಂಡೂರಾವ್ ಸೇರಿದಂತೆ ಪ್ರಮುಖ ನಾಯಕರ ಆಸನಗಳಲ್ಲಿ ಬದಲಾವಣೆ ಮಾಡಲಾಗಿದ್ದು, ಹಿರಿತನದ ಆಧಾರದ ಮೇಲೆ ಹೊಸ ಸಚಿವರಿಗೆ ಮುಂಭಾಗದ ಸಾಲಿನಲ್ಲಿ ಆಸನ ಕಲ್ಪಿಸಲಾಗಿದೆ.
ವಿಧಾನ ಪರಿಷತ್‌ನ ಹಂಗಾಮಿ ಸಭಾಪತಿ ಪುಟ್ಟಣ್ಣ ಅವರು ಈಗಾಗಲೇ ಕಲಾಪದ ಸಿದ್ಧತೆಗಳನ್ನು ಪರಿಶೀಲಿಸಿದ್ದು, ಅಧಿವೇಶನ ಸುಸೂತ್ರವಾಗಿ ನಡೆಯಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ.



