ಚಾಮರಾಜನಗರ: ಹನೂರು ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ನಡೆದ ಶೂಟೌಟ್ ಪ್ರಕರಣದ ಬಳಿಕ ಅರಣ್ಯ ಇಲಾಖೆಯ ಸಿಬ್ಬಂದಿ ಕರ್ತವ್ಯ ಸ್ಥಳದಲ್ಲಿ ಇಲ್ಲ ಎಂದು ಹನೂರು ಜೆಡಿಎಸ್ ಶಾಸಕ ಎಂ.ಆರ್. ಮಂಜುನಾಥ್ ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸುತ್ತಿರುವ ಸ್ಥಳೀಯರೊಂದಿಗೆ ಮಾತನಾಡಿದ ಅವರು, ಮೃತಪಟ್ಟವರ ಕುಟುಂಬಗಳಿಗೆ ತಲಾ ₹15 ಲಕ್ಷ ಪರಿಹಾರ ದೊರೆಯುವಂತೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ರಾಜ್ಯ ಸರ್ಕಾರ ಈಗಾಗಲೇ ತಲಾ ₹5 ಲಕ್ಷ ಪರಿಹಾರ ಘೋಷಿಸಿದೆ. ವೈಯಕ್ತಿಕವಾಗಿ ತಾವು ತಲಾ ₹10 ಲಕ್ಷ ನೆರವು ನೀಡಲಿದ್ದು, ಒಟ್ಟಾರೆ ಪ್ರತಿ ಕುಟುಂಬಕ್ಕೂ ₹15 ಲಕ್ಷ ತಲುಪುವ ಜವಾಬ್ದಾರಿಯನ್ನು ವಹಿಸಿಕೊಳ್ಳುವುದಾಗಿ ಹೇಳಿದರು.
ಗುಂಡು ಹಾರಿಸಿದ ಅರಣ್ಯ ಸಿಬ್ಬಂದಿಯನ್ನು ಸ್ಥಳಕ್ಕೆ ಕರೆತರಬೇಕು ಎಂಬ ಪ್ರತಿಭಟನಾಕಾರರ ಬೇಡಿಕೆ ಕುರಿತು ಪ್ರತಿಕ್ರಿಯಿಸಿದ ಅವರು, “ಈಗಲೇ ಅವರನ್ನು ಇಲ್ಲಿ ಕರೆತರಲು ಸಾಧ್ಯವಿಲ್ಲ. ಅವರ ವಿರುದ್ಧ ಈಗಾಗಲೇ ಪ್ರಕರಣ ದಾಖಲಾಗಿದೆ. ಸಂಬಂಧಪಟ್ಟ ಸಿಬ್ಬಂದಿಯನ್ನು ತಕ್ಷಣ ಅಮಾನತುಗೊಳಿಸಿ, ಕಾನೂನು ಪ್ರಕಾರ ಸಮಗ್ರ ತನಿಖೆ ನಡೆಸಬೇಕು” ಎಂದು ಆಗ್ರಹಿಸಿದರು.
ಪ್ರದೇಶದಲ್ಲಿನ ಉದ್ವಿಗ್ನ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಸ್ಥಳೀಯರೊಂದಿಗೆ ಮಾತುಕತೆ ನಡೆಸಲಾಗುತ್ತಿದ್ದು, ಪ್ರತಿಭಟನೆ ಕೈಬಿಡುವಂತೆ ಮನವೊಲಿಸುವ ಪ್ರಯತ್ನಗಳು ಮುಂದುವರಿದಿವೆ ಎಂದು ಶಾಸಕ ಮಂಜುನಾಥ್ ತಿಳಿಸಿದ್ದಾರೆ.



