ನವದೆಹಲಿ: ಭೀಕರ ಪ್ರವಾಹದಿಂದ ತತ್ತರಿಸಿರುವ ನೇಪಾಳಕ್ಕೆ ಭಾರತ ನೆರವಿನ ಹಸ್ತ ಚಾಚಿದೆ.
ಪ್ರವಾಹದಲ್ಲಿ ಮೃತಪಟ್ಟವರಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಸಂಕಷ್ಟದ ಸಮಯದಲ್ಲಿ ನೇಪಾಳದೊಂದಿಗೆ ಭಾರತ ಗಟ್ಟಿಯಾಗಿ ನಿಲ್ಲಲಿದೆ ಎಂದು ಭರವಸೆ ನೀಡಿದ್ದಾರೆ.
ಬುಧವಾರ ನೇಪಾಳ ಪ್ರಧಾನಿ ಬಾಲೆನ್ ಶಾ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಪ್ರಧಾನಿ ಮೋದಿ, ಪ್ರವಾಹದಿಂದ ಉಂಟಾಗಿರುವ ಹಾನಿಯ ಕುರಿತು ಮಾಹಿತಿ ಪಡೆದರು. ನೇಪಾಳಕ್ಕೆ ಅಗತ್ಯವಿರುವ ಎಲ್ಲ ನೆರವು ಹಾಗೂ ಪರಿಹಾರ ಸಹಾಯ ನೀಡಲು ಭಾರತ ಸಿದ್ಧವಿದೆ ಎಂದು ತಿಳಿಸಿದ್ದಾರೆ.
ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಎರಡು ಜಿಲ್ಲೆಗಳಲ್ಲಿ ಭಾರಿ ಪ್ರವಾಹ ಉಂಟಾಗಿದೆ. ಪ್ರವಾಹದಲ್ಲಿ ಕನಿಷ್ಠ 22 ಮಂದಿ ಮೃತಪಟ್ಟಿದ್ದು, ಸುಮಾರು 400 ಜನರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ನದಿ ತೀರದ ಹಲವು ಪ್ರದೇಶಗಳು ಜಲಾವೃತವಾಗಿದ್ದು, ಹಲವಾರು ಜಲವಿದ್ಯುತ್ ಯೋಜನೆಗಳಿಗೂ ಹಾನಿಯಾಗಿದೆ.
ಪ್ರವಾಹ ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಾಗಿ ಭಾರತವು ನೇಪಾಳದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸುತ್ತಿದೆ. ಭಾರತೀಯ ವಾಯುಪಡೆಯ ವಿಮಾನಗಳ ಮೂಲಕ ಔಷಧಿ, ಆಹಾರ ಹಾಗೂ ಅಗತ್ಯ ವಸ್ತುಗಳನ್ನು ಕಳುಹಿಸಲು ಸಿದ್ಧತೆ ನಡೆಸಲಾಗುತ್ತಿದೆ. ರಕ್ಷಣಾ ಕಾರ್ಯಕ್ಕೆ ನೆರವಾಗಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ಸಿಬ್ಬಂದಿಯನ್ನು ನೇಪಾಳಕ್ಕೆ ಕಳುಹಿಸುವ ಬಗ್ಗೆಯೂ ಸರ್ಕಾರ ಚಿಂತನೆ ನಡೆಸುತ್ತಿದೆ.
105 ಭಾರತೀಯರು ಸೇರಿದಂತೆ 291 ವಿದೇಶಿಯರು ನಾಪತ್ತೆ:
ರಸುವಾ ಪ್ರದೇಶದ ಭೋಟೆ ಕೋಶಿ ನದಿಯಲ್ಲಿ ಉಂಟಾದ ಹಠಾತ್ ಪ್ರವಾಹದ ಬಳಿಕ 105 ಭಾರತೀಯರು ಸೇರಿದಂತೆ 291 ವಿದೇಶಿ ಪ್ರಜೆಗಳು ನಾಪತ್ತೆಯಾಗಿದ್ದಾರೆ ಎಂದು ನೇಪಾಳ ಪ್ರವಾಸೋದ್ಯಮ ಮಂಡಳಿ ಮಾಹಿತಿ ನೀಡಿದೆ.
ಒಟ್ಟು 384 ಪ್ರಯಾಣಿಕರು ನಾಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಅವರಲ್ಲಿ 291 ವಿದೇಶಿ ಪ್ರಜೆಗಳು ಹಾಗೂ 93 ನೇಪಾಳಿ ಪ್ರಜೆಗಳು ಸೇರಿದ್ದಾರೆ.
ನಾಪತ್ತೆಯಾಗಿರುವವರ ಕುಟುಂಬಸ್ಥರಲ್ಲಿ ಆತಂಕ ಹೆಚ್ಚಾಗಿದ್ದು, ಭಾರತೀಯರನ್ನು ಸುರಕ್ಷಿತವಾಗಿ ಪತ್ತೆಹಚ್ಚಲು ಕ್ರಮ ಕೈಗೊಳ್ಳಲಾಗುತ್ತಿದೆ. ನೇಪಾಳದಲ್ಲಿರುವ ಭಾರತೀಯ ರಾಯಭಾರ ಕಚೇರಿಯೂ ತುರ್ತು ಸಂಪರ್ಕ ಸಂಖ್ಯೆಯನ್ನು ಬಿಡುಗಡೆ ಮಾಡಿದೆ.



