ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯ ಸರ್ಕಾರ ಬರಪೀಡಿತ ತಾಲೂಕುಗಳ ಪಟ್ಟಿಯಲ್ಲಿ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕನ್ನು ಮಾತ್ರ ಸೇರಿಸಿರುವುದು ಜಿಲ್ಲೆಯ ರೈತರಿಗೆ ಮಾಡಿದ ಅನ್ಯಾಯ ಎಂದು ಜೆಡಿಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಜಿಅಲಿ ಎಚ್. ಕೊಪ್ಪಳ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜಿಲ್ಲೆಯಲ್ಲಿ ಮುಂಗಾರು ಮಳೆ ಸಮರ್ಪಕವಾಗಿ ಆಗಿಲ್ಲ. ಬಿತ್ತನೆ ಮಾಡಿದ ರೈತರು ಲಕ್ಷಾಂತರ ರೂಪಾಯಿ ನಷ್ಟ ಅನುಭವಿಸುತ್ತಿದ್ದು, ಬರ ಅಧ್ಯಯನ ಯಾವ ಆಧಾರದ ಮೇಲೆ ನಡೆಸಲಾಗಿದೆ ಎಂಬುದು ಪ್ರಶ್ನೆಯಾಗಿದೆ ಎಂದು ಅವರು ತಿಳಿಸಿದ್ದಾರೆ.
ರಾಜ್ಯ ಸರ್ಕಾರ ಗದಗ ಜಿಲ್ಲೆಯ ಎಲ್ಲ ಏಳು ತಾಲೂಕುಗಳಲ್ಲಿ ಮರು ಸಮೀಕ್ಷೆ ನಡೆಸಿ, ವಾಸ್ತವ ಪರಿಸ್ಥಿತಿಯನ್ನು ಪರಿಗಣಿಸಿ ಜಿಲ್ಲೆಯ ಎಲ್ಲ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಬೇಕು ಎಂದು ಪತ್ರಿಕಾ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.
ಗದಗ ಜಿಲ್ಲೆಯ ರೈತರ ಸಂಕಷ್ಟವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಕೂಡಲೇ ಎಲ್ಲ ಏಳು ತಾಲೂಕುಗಳಲ್ಲಿ ಮರು ಸಮೀಕ್ಷೆ ನಡೆಸಿ ಬರಪೀಡಿತ ಪ್ರದೇಶಗಳೆಂದು ಘೋಷಿಸಬೇಕು.
– ಹಾಜಿಅಲಿ ಎಚ್. ಕೊಪ್ಪಳ, ಜೆಡಿಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ



