ಭಾಗಪತ್: ಉತ್ತರ ಪ್ರದೇಶದ ಭಾಗಪತ್ ಜಿಲ್ಲೆಯಲ್ಲಿ ಮಧ್ಯರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 12 ಮಂದಿ ಮೃತಪಟ್ಟಿದ್ದು, 22 ಮಂದಿ ಗಾಯಗೊಂಡಿದ್ದಾರೆ.
ರಾಜಸ್ಥಾನದಿಂದ ಬುಡೌನ್‌ಗೆ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಪಿಕ್‌ಅಪ್ ವಾಹನವೊಂದು ಖೇಕ್ರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಸುಮಾರು 32 ಪ್ರಯಾಣಿಕರಿದ್ದ ವಾಹನದಲ್ಲಿ ಬಹುತೇಕರು ನಿದ್ರೆಯಲ್ಲಿದ್ದ ವೇಳೆ ಅಪಘಾತ ಸಂಭವಿಸಿದೆ.
ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಹಾಗೂ ಆ್ಯಂಬುಲೆನ್ಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಗಾಯಾಳುಗಳನ್ನು ಖೇಕ್ರಾ ಹಾಗೂ ಭಾಗಪತ್‌ನ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಗಂಭೀರವಾಗಿ ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಉನ್ನತ ವೈದ್ಯಕೀಯ ಕೇಂದ್ರಗಳಿಗೆ ರವಾನಿಸಲಾಗಿದೆ.
ಅಪಘಾತದಲ್ಲಿ ಮೃತಪಟ್ಟವರ ಗುರುತು ಪತ್ತೆಹಚ್ಚುವ ಕಾರ್ಯ ಮುಂದುವರಿದಿದೆ. ಗಾಯಗೊಂಡ ಪ್ರಯಾಣಿಕ ಕುಂವರ್ ಪಾಲ್, “ದಿಢೀರನೆ ಭಾರಿ ಸದ್ದು ಕೇಳಿಸಿತು. ವಾಹನ ಪಲ್ಟಿಯಾದ ಬಳಿಕ ಎಲ್ಲೆಡೆ ಚೀರಾಟ ಕೇಳಿಸಿತು” ಎಂದು ಘಟನೆಯ ಭೀಕರತೆಯನ್ನು ವಿವರಿಸಿದ್ದಾರೆ.



